ಬೆಂಗಳೂರು: 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ ಜಾರಿ:
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಪಾಲಿಟೆಕ್ನಿಕ್ಗಳ ಬಲವರ್ಧನೆ, ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ADB ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ʻಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆʼ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಈ ಯೋಜನೆಯಡಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ADB ನೆರವಿನೊಂದಿಗೆ 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

