ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಮಾಟ-ಮಂತ್ರ ಮಾಡಿದ್ದಾರೆ. ಬಾಕ್ಸ್ ನಲ್ಲಿ ಹಾಕಿ ವಶೀಕರಣ ಮಾಡಲಾಗಿದೆ. ಕೋಣ ಬಲಿ ಕೊಟ್ಟಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಮಂಕಾಗಿದ್ದಾರೆ ಎಂದು ಬಿಜೆಪಿ ಶಾಸಕ ಮುನಿರತ್ನ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಪರೋಕ್ಷ ಆರೋಪಗಳನ್ನು ಮಾಡಿದ್ದರು. ಮುನಿರತ್ನ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಿನ್ನೆ ಶಾಸಕ ಮುನಿರತ್ನ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಡುವೆ ನಡೆದ ಮಾತುಕತೆ, ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಮುನಿರತ್ನ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿ, ಡಿಸಿಎಂ ಡಿ ಕೆ ಶಿವಕುಮಾರ್ ರವರು ನಿನ್ನೆ ಬೆಂಗಳೂರು ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಲಾಲ್ ಬಾಗ್ ನಂತೆ ಮತ್ತಿಕರೆಯ ಜೆ ಪಿ ಪಾರ್ಕ್ ನಲ್ಲಿಯೂ ಕಾರ್ಯಕ್ರಮವಿತ್ತು. ಶಾಸಕ ಮುನಿರತ್ನರವರು ವೇದಿಕೆಗೆ ಆಗಮಿಸಿ, ತಮ್ಮ ಅಭಿಪ್ರಾಯವನ್ನು ನೀಡಬಹುದಾಗಿತ್ತು. ಆದರೆ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಲಿಲ್ಲ. ಕಾರ್ಯಕ್ರಮಕ್ಕೆ ಅವರಿಗೆ ಆಹ್ವಾನವಿತ್ತೇ ಇಲ್ಲವೇ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.
ಇದೇ ವೇಳೆ ಮುನಿರತ್ನ ಮಾಟ-ಮಂತ್ರದ ಬಗ್ಗೆ ಹೇಳಿದ್ದಾರೆ. ನಾನು ಯಾವುದೇ ಮಾಟ-ಮಂತ್ರಗಳಲ್ಲಿ ನಂಬಿಕೆಯಿರಿಸಿಲ್ಲ ಎಂದು ತಿರುಗೇಟು ನೀಡಿದರು.