ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಮುಂದಾಗಿದ್ದಾರೆ. ನಾಳೆ ಬೆಳಿಗ್ಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಈ ನಡುವೆ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ? ಎಂಬ ಚರ್ಚೆ ಆರಂಭವಾಗಿದೆ.
ಸಿಎಂ ಹುದ್ದೆ ಮೇಲೆ ಮೊದಲಿನಿಂದಲೂ ಕಣ್ಣಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರು ಈಗಾಗಲೇ ಕೇಳಿಬರುತ್ತಿದೆ. ಆದರೆ ಗೃಹ ಸಚಿವ ಪರಮೇಶ್ವರ್ ಹೆಸರು ಕೂಡ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.
ದೆಹಲಿಯಲ್ಲಿ ನಡೆದ ಎಐಸಿಸಿ ನಾಯಕರು ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಮ್ಯಾರಥಾನ್ ಸಭೆಯಲ್ಲಿ ಅಧಿಕಾರ ಹಂಚಿಕೆ ಸೂತ್ರದಂತೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ. ರಾಹುಲ್ ಗಾಂಧಿ ಮಾತಿಗೆ ಒಪ್ಪಿದ ಸಿದ್ದರಾಮಯ್ಯ ಅಧಿಕಾರ ತ್ಯಾಗಕ್ಕೆ ಸಮ್ಮತಿ ನೀಡಿದ್ದಾರೆ. ಆದರೆ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹೆಸರಿನ ಬದಲು ಪರಮೇಶ್ವರ್ ಹೆಸರನ್ನು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಮುಂದಿನ ಮುಖ್ಯಮಂತ್ರಿ ಯಾರ ಹೆಸರನ್ನು ಸೂಚಿಸುತ್ತೀರಿ? ಎಂಬ ರಾಹುಲ್ ಗಾಂಧಿ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ನೇರವಾಗಿ ಡಾ.ಜಿ.ಪರಮೇಶ್ವರ್ ಹೆಸರು ಶಿಫಾರಸು ಮಾಡಿದ್ದಾರೆ. ಪಕ್ಷ ಸಂಘಟನೆ, ಅಧಿಕಾರದ ಅನುಭವದ ಆಧಾರದ ಮೇಲೆ ಪರಮೆಶ್ವರ್ ಅವರಿಗೆ ಸಿಎಂ ಸ್ಥಾನ ನೀಡುವಂತೆ ಶಿಫಾರಸು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪರಮೇಶ್ವರ್ ಹೆಸರು ಕೂಡ ಸಿಎಂ ಸ್ಥಾನದಲ್ಲಿ ಮುಂಚೂಣಿಯಲ್ಲಿದೆ.
ಆದರೆ ಈ ಬಗ್ಗೆ ಹೈಕಮಾಂಡ್ ನಾಯಕರಾಗಲಿ, ರಾಹುಲ್ ಗಾಂಧಿಯಾಗಲಿ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಹೈಕಮಾಂಡ್ ಮಟ್ಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

