ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಘಟನೆ ಖಂಡಿಸಿ ಪ್ರತಿಭಟನೆ ಭುಗಿಲೆದ್ದ ಬೆನ್ನಲ್ಲೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಪೊಲೀಸರ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಈ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆಯಾಗಿದೆ. ಮಸೀದಿ ಬಳಿ ಮೆರವಣಿಗೆ ಸಾಗುವಾಗ ಕಲ್ಲುತೂರಾಟ ಪ್ರಕರಣ ನಡೆದಿದೆ. ಕೆಲವರು ಗುಂಪು ಕಟ್ಟಿಕೊಂಡು ಗಲಾಟೆಗೆ ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ಹೇಳಿದರು.
ಮದ್ದೂರುನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಈಗಾಗಲೇ 21 ಆರೋಪಿಗಳನ್ನು ಬಂಧಿಸಲಾಗಿದೆ. ತಪ್ಪಿತಸ್ಥರು ಯಾರೇ ಆಗಿರಲಿ, ಹಿಂದೂ ಆಗಿರಲಿ, ಮುಸ್ಲಿಂ ಆಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಮದ್ದೂರಿಗೆ ತೆರಳುತ್ತಿದ್ದಾರೆ. ಉಸ್ತುವಾರಿ ಸಚಿವರು ವರದಿ ನೀಡಿದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದರು.
ಬಿಜೆಪಿ ನಾಯಕರ ಪ್ರತಿಭಟನೆ ಹಾಗೂ ಲಾಠಿಚಾರ್ಜ್ ಮಾಡಿರುವ ಪೊಲೀಸರ ಅಮಾನತಿಗೆ ಆಗ್ರಹ ವಿಚಾರವಾಗಿ ಪ್ರತಿಕ್ರೊಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಸಮಾಜದಲ್ಲಿ ನೆಮ್ಮದಿ ಕೆಡಿಸಿದ್ದೇ ಬಿಜೆಪಿಯವರು ಎಂದು ಕಿಡಿಕಾರಿದರು.
ಮಸೀದಿ ಮುಂದೆ ಮೆರವಣಿಗೆ ಹೋಗುವಾಗ ಕಲ್ಲು ತೂರಾಟ ನಡೆದಿದೆ. ಗುಂಪುಕಟ್ಟಿಕೊಂಡು ಗಲಾಟೆ ಮಾಡಲು ಶುರು ಮಾಡಿದ್ದಾರೆ. ಹಾಗಾಗಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಪೊಲೀಸರು ಯಾರೂ ತಪ್ಪು ಮಾಡಿಲ್ಲ. ಬಿಜೆಪಿಯವರು ಪ್ರಚೋದನೆ ಮಾಡುವುದದಲ್ಲಿ , ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ವಾಗ್ದಾಳಿ ನಡೆಸಿದರು.