HomeUncategorizedರಾಜ್ಯದಲ್ಲಿ ನಡೆಯುತ್ತಿರುವ SIR​​ನಲ್ಲಿ ತುರ್ತು ಮಧ್ಯ ಪ್ರವೇಶ ಮಾಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದ...

ರಾಜ್ಯದಲ್ಲಿ ನಡೆಯುತ್ತಿರುವ SIR​​ನಲ್ಲಿ ತುರ್ತು ಮಧ್ಯ ಪ್ರವೇಶ ಮಾಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆಯಲ್ಲಿ ಹಲವು ಗೊಂದಲಗಳಿದ್ದು, ಮಧ್ಯಪ್ರವೇಶ ಮಾಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ.

ಜಿಬಿಎ ವ್ಯಾಪ್ತಿಯಲ್ಲಿ 27 ವಾರ್ಡ್ ಗಳಲ್ಲಿ ರಾಜ್ಯ ಚುನಾವಣಾ ಆಯೋಗದಿಂದ ಪ್ರತ್ಯೇಕ ಎಸ್ಐಆರ್ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್​​ನಲ್ಲಿ ತುರ್ತು ಮಧ್ಯ ಪ್ರವೇಶ ಮಾಡಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ. ಸಚಿವೆ ಶೋಭಾ ಕರಂದ್ಲಾಜೆ ಎರಡು ಬಾರಿ ಪತ್ರ ಬರೆದು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತ್ಯೇಕ ವೇಳಾಪಟ್ಟಿ ಹಾಗೂ ವಿಭಿನ್ನ ಕಟ್-ಆಫ್ ದಿನಾಂಕಗಳನ್ನು ನಿಗದಿಪಡಿಸಿ ಮತ್ತೊಂದು ಸಮಾನಾಂತರ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿರುವುದು ಗಮನಕ್ಕೆ ಬಂದಿದೆ. ಇಂತಹ ಸಮಾನಾಂತರ ಪ್ರಕ್ರಿಯೆಯು ಮತದಾರರು, ರಾಜಕೀಯ ಪಕ್ಷಗಳು ಹಾಗೂ ಚುನಾವಣಾ ಅಧಿಕಾರಿಗಳಲ್ಲಿ ಗೊಂದಲವನ್ನು ಉಂಟುಮಾಡುವುದಲ್ಲದೆ, ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಗೆ ಧಕ್ಕೆಯನ್ನುಂಟುಮಾಡಬಹುದು ಎಂದವರು ಎಚ್ಚರಿಸಿದ್ದಾರೆ.

ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ತಯಾರಿ, ಪರಿಷ್ಕರಣೆ, ಹೆಸರು ಸೇರ್ಪಡೆ ಹಾಗೂ ಹೆಸರು ತೆಗೆದುಹಾಕುವ ಪ್ರಕ್ರಿಯೆಗಳು ಜನಪ್ರತಿನಿಧಿತ್ವ ಕಾಯ್ದೆ, 1950 ಹಾಗೂ ಮತದಾರರ ನೋಂದಣಿ ನಿಯಮಗಳು, 1960ರ ಪ್ರಕಾರ ನಿಯಂತ್ರಿಸಲ್ಪಡುತ್ತವೆ. ಈ ಕಾನೂನುಬದ್ಧ ಕರ್ತವ್ಯಗಳನ್ನು ಭಾರತ ಚುನಾವಣಾ ಆಯೋಗ ನೇಮಕ ಮಾಡುವ Electoral Registration Officers (ERO) ಮಾತ್ರ ನಿರ್ವಹಿಸಬೇಕು. ಭಾರತ ಚುನಾವಣಾ ಆಯೋಗ ಸಿದ್ಧಪಡಿಸುವ ಮತದಾರರ ಪಟ್ಟಿಯೇ ವಿಧಾನಸಭಾ ಕ್ಷೇತ್ರಗಳ ಅಧಿಕೃತ ಕಾನೂನುಬದ್ಧ ಮತದಾರರ ಪಟ್ಟಿಯಾಗಿದ್ದು, ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ ರಾಜ್ಯ ಚುನಾವಣಾ ಆಯೋಗ ಅದನ್ನೇ ಅಳವಡಿಸಿಕೊಳ್ಳುತ್ತದೆ.

ಭಾರತ ಸಂವಿಧಾನದ ಅನುಚ್ಛೇದ 243K ಮತ್ತು 243ZA ಅಡಿಯಲ್ಲಿ ರಚನೆಯಾದ ಕರ್ನಾಟಕ ರಾಜ್ಯ ಚುನಾವಣಾ ಆಯೋಗಕ್ಕೆ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಜವಾಬ್ದಾರಿ ನೀಡಲಾಗಿದೆ. ಆದರೆ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಅಥವಾ ವಿಶೇಷ ತೀವ್ರ ಪರಿಷ್ಕರಣೆ ನಡೆಸುವ ಸ್ವತಂತ್ರ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ. ಈ ಅಧಿಕಾರ ಸಂಪೂರ್ಣವಾಗಿ ಭಾರತ ಚುನಾವಣಾ ಆಯೋಗದ ವ್ಯಾಪ್ತಿಗೆ ಸೇರಿದೆ. ಆದ್ದರಿಂದ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಪ್ರಾರಂಭಿಸಿರುವ ಸಮಾನಾಂತರ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯು ಸಂವಿಧಾನಾತ್ಮಕ ಹಾಗೂ ಕಾನೂನುಬದ್ಧ ವ್ಯವಸ್ಥೆಗೆ ವಿರುದ್ಧವಾಗಿರುವಂತೆ ಕಂಡುಬರುತ್ತದೆ. ಇದು ಅನಗತ್ಯ ಕೆಲಸದ ಪುನರಾವರ್ತನೆ, ಸಾರ್ವಜನಿಕ ಹಣದ ವ್ಯರ್ಥ ವೆಚ್ಚ, ಆಡಳಿತಾತ್ಮಕ ಗೊಂದಲ ಹಾಗೂ ಮತದಾರರ ಪಟ್ಟಿಯ ವಿಶ್ವಾಸಾರ್ಹತೆಯ ಬಗ್ಗೆ ಅನುಮಾನಗಳನ್ನು ಸೃಷ್ಟಿಸುವ ಸಾಧ್ಯತೆಯಿದೆ ಎಂದವರು ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ನಿರ್ದೇಶನಗಳ ಪ್ರಕಾರ ಕಡ್ಡಾಯವಾಗಿ ಮನೆ-ಮನೆಗೆ ತೆರಳಿ ಪರಿಶೀಲನೆ ನಡೆಸಬೇಕಾದರೂ, ರಾಜ್ಯದ ಅನೇಕ ಕಡೆಗಳಲ್ಲಿ ಈ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಸಮುದಾಯ ಭವನಗಳು ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಶಿಬಿರಗಳನ್ನು ಆಯೋಜಿಸುವ ಮೂಲಕ ನಡೆಸಲಾಗುತ್ತಿದೆ. ಇಂತಹ ವಿಧಾನವು ವಿಶೇಷ ತೀವ್ರ ಪರಿಷ್ಕರಣೆಯ ಮೂಲ ಉದ್ದೇಶವನ್ನೇ ಹಾಳುಮಾಡುತ್ತದೆ. ಏಕೆಂದರೆ, ಈ ಪ್ರಕ್ರಿಯೆಯ ಮುಖ್ಯ ಉದ್ದೇಶ ಪ್ರತಿಯೊಬ್ಬ ಮತದಾರನನ್ನು ಅವರ ಸಾಮಾನ್ಯ ವಾಸಸ್ಥಳದಲ್ಲಿಯೇ ಭೌತಿಕವಾಗಿ ಪರಿಶೀಲಿಸುವುದಾಗಿದೆ. ಈ ನಿಗದಿತ ವಿಧಾನದಿಂದ ಮತದಾರರ ಪಟ್ಟಿಯ ಸಿದ್ಧತೆಯಲ್ಲಿ ಅಕ್ರಮಗಳು ನಡೆಯುವ ಸಾಧ್ಯತೆ ಹೆಚ್ಚಾಗುತ್ತದೆ.

ರಾಜ್ಯ ಸರ್ಕಾರವು ರಾಜಕೀಯ ಲಾಭಕ್ಕಾಗಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು, ಎಸ್ ಐ ಆರ್ ಗೆ ನಿಗದಿಪಡಿಸಿರುವ ವಿಧಾನವನ್ನು ಉದ್ದೇಶಪೂರ್ವಕವಾಗಿ ದುರ್ಬಲಗೊಳಿಸುತ್ತಿದೆ ಎಂಬ ಆತಂಕವೂ ವ್ಯಾಪಕವಾಗಿ ವ್ಯಕ್ತವಾಗುತ್ತಿದೆ. ಮನೆ-ಮನೆಗೆ ತೆರಳಿ ಪರಿಣಾಮಕಾರಿ ಪರಿಶೀಲನೆ ನಡೆಸುವ ಕ್ರಮವನ್ನು ಕೈಬಿಟ್ಟಿರುವುದರಿಂದ, ಜನಪ್ರತಿನಿಧಿತ್ವ ಕಾಯ್ದೆ, 1950ರ ಪ್ರಕಾರ ಮತದಾರರಾಗಿ ನೋಂದಣಿಗೆ ಅರ್ಹರಲ್ಲದ ವ್ಯಕ್ತಿಗಳು, ಅಕ್ರಮ ವಲಸಿಗರು ಹಾಗೂ ಇತರ ಅನರ್ಹ ವ್ಯಕ್ತಿಗಳ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವ ಗಂಭೀರ ಅಪಾಯವಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular