ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ನೂರಾರು ಶವಗಳನ್ನು ಹೂತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಆರಂಭಿಸಿದೆ.
ಸಾಕ್ಷಿ ದೂರುದಾರ ಎಸ್ಐಟಿ ಮುಂದೆ ಶನಿವಾರ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬಾಡಿಗೆ ಕಾರ್ ನಲ್ಲಿ ಇಬ್ಬರು ವಕೀಲರೊಂದಿಗೆ ಬಂದ ವ್ಯಕ್ತಿ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಉಳಿದುಕೊಂಡಿರುವ ಎಸ್ಐಟಿ ಅಧಿಕಾರಿಗಳನ್ನು ಭೇಟಿ ಮಾಡಿ ಹೇಳಿಕೆ ದಾಖಲಿಸಿದ್ದಾರೆ.
ಎಸ್ಐಟಿಯಲ್ಲಿರುವ ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್. ಅನುಚೇತ್, ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿತೇಂದ್ರ ಕುಮಾರ್ ನೇತೃಪದ ಪೊಲೀಸರ ತಂಡದ ಹೇಳಿಕೆ ದಾಖಲಿಸಿಕೊಂಡಿದೆ. ಎಸ್ಐಟಿ ಮುಖ್ಯಸ್ಥರಾಗಿರುವ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಭಾನುವಾರ ಪ್ರಕರಣದ ತನಿಖೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.