ದುಬೈಯಿಂದ ಮುಂಬೈಗೆ ಹೊರಟಿದ್ದ ಇಂಡಿಗೋ ವಿಮಾನವು ಪೈಲಟ್ಗೆ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ರಾಜ್ಕೋಟ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು.
ವಿಮಾನ ಸುರಕ್ಷಿತವಾಗಿ ಇಳಿದಿದ್ದು, ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್, ಅಗ್ನಿಶಾಮಕ ದಳ ಹಾಗೂ ಆಂಬುಲೆನ್ಸ್ಗಳನ್ನು ವಿಮಾನ ನಿಲ್ದಾಣದಲ್ಲಿ ಸಜ್ಜುಗೊಳಿಸಲಾಗಿತ್ತು. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ಪೈಲಟ್ಗೆ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣ ರಾಜ್ಕೋಟ್ ಏರ್ ಟ್ರಾಫಿಕ್ ಕಂಟ್ರೋಲ್ (ATC) ಅನ್ನು ಸಂಪರ್ಕಿಸಿ ತುರ್ತು ಭೂಸ್ಪರ್ಶಕ್ಕೆ ಅನುಮತಿ ಕೋರಿದ್ದರು.
ರಾಜ್ಕೋಟ್ ಪೊಲೀಸ್ ಆಯುಕ್ತರು, “ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಎಲ್ಲ ಪ್ರಯಾಣಿಕರೂ ಸುರಕ್ಷಿತರಾಗಿದ್ದು, ವಿಮಾನದಿಂದ ಯಶಸ್ವಿಯಾಗಿ ಸ್ಥಳಾಂತರಿಸಲಾಗಿದೆ” ಎಂದು ತಿಳಿಸಿದ್ದಾರೆ.
ಇತ್ತೀಚಿನ ತಿಂಗಳುಗಳಲ್ಲಿ ಎರಡನೇ ತುರ್ತು ಘಟನೆ
ಕಳೆದ ಮೇ ತಿಂಗಳಲ್ಲಿಯೂ ಇಂಡಿಗೋ ವಿಮಾನದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಹೈದರಾಬಾದ್ನಿಂದ ಚಂಡೀಗಢಕ್ಕೆ ತೆರಳಿದ್ದ ವಿಮಾನದಲ್ಲಿ ಪ್ರಯಾಣಿಕನ ಪವರ್ ಬ್ಯಾಂಕ್ ಸ್ಫೋಟಗೊಂಡು ಕ್ಯಾಬಿನ್ನಲ್ಲಿ ಹೊಗೆ ಆವರಿಸಿತ್ತು.198 ಪ್ರಯಾಣಿಕರು ಮತ್ತು 6 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಶಹೀದ್ ಭಗತ್ ಸಿಂಗ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ, ಪವರ್ ಬ್ಯಾಂಕ್ಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಪ್ರಯಾಣಿಕರೊಬ್ಬರು ಸಿಬ್ಬಂದಿಯ ಗಮನಕ್ಕೆ ತಂದಿದ್ದರು.
ಕ್ಯಾಬಿನ್ ಸಿಬ್ಬಂದಿ ಬೆಂಕಿಯನ್ನು ತಕ್ಷಣ ನಂದಿಸಿದರೂ, ಹೊಗೆ ಕ್ಯಾಬಿನ್ ತುಂಬಿದ್ದರಿಂದ ತುರ್ತು ಸ್ಲೈಡ್ಗಳ ಮೂಲಕ ಎಲ್ಲಾ ಪ್ರಯಾಣಿಕರನ್ನು ಹೊರಗೆ ಸ್ಥಳಾಂತರಿಸಲಾಯಿತು. ಈ ವೇಳೆ ಒಬ್ಬ ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಉಳಿದವರೆಲ್ಲ ಸುರಕ್ಷಿತರಾಗಿದ್ದರು.

