ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿದ್ದು, ಇಂದಿನಿಂದ ಭಾನುವಾರದವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ದುರ್ಬಲವಾಗಿರುವುದರಿಂದ ರಾಜ್ಯದಲ್ಲಿ ತಾಪಮಾನ ಏರುಗತಿಯಲ್ಲಿದೆ. ಮುಂದಿನ ನಾಲ್ಕು ದಿನಗಳ ಅವಧಿಯಲ್ಲಿ ಗರಿಷ್ಠ ಉಷ್ಣಾಂಶ ಮೂರರಿಂದ ಐದು ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಳವಾಗುವ ಸಂಭವವಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಗುರುವಾರ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೂಡ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚು ವರದಿಯಾಗುತ್ತಿದೆ. ಮುಂದಿನ ಒಂದು ವಾರ ಒಣ ಹವೆ ಮುಂದುವರೆಯುವ ಸಾಧ್ಯತೆಯಿದ್ದು, ಕೆಲವು ಕಡೆ ಮಾತ್ರ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.
ಮಳೆಗಾಲದಲ್ಲಿಯೂ ಬೇಸಿಗೆ ಬಿರು ಬಿಸಿಲು ಕಂಡು ಬರುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ 32 ರಿಂದ 38.2 ಡಿಗ್ರಿ ಸೆಲ್ಸಿಯಸ್ ನಷ್ಟು ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಿನದಿಂದ ದಿನಕ್ಕೆ ಮಳೆ ಪ್ರಮಾಣ ಕಡಿಮೆಯಾಗಿ ಬಿಸಿಲ ತಾಪ ಏರಿಕೆಯಾಗುತ್ತಿದ್ದು, ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ, ದಕ್ಷಿಣ ಒಳನಾಡು ಭಾಗದಲ್ಲಿ ಸತತ ಮೂರು ದಿನದಿಂದ ಗರಿಷ್ಠ ಉಷ್ಣಾಂಶ ಏರಿಕೆಯಾಗುತ್ತಿದೆ. ಜುಲೈ 19ರವರೆಗೆ ಉಷ್ಣಾಂಶದ ಪ್ರಮಾಣ ಮೂರು ಡಿಗ್ರಿ ಸೆಲ್ಸಿಯಸ್ ನಿಂದ ಐದು ಡಿಗ್ರಿ ಸೆಲ್ಸಿಯಸ್ ವರೆಗೂ ಏರಿಕೆಯಾಗುವ ಸಾಧ್ಯತೆ ಇದೆ.

