ಬೆಂಗಳೂರು: ಮಳೆಗಾಲದ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳ ಆತಂಕ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಳೀಯ ಶಾಸಕರ ನೇತೃತ್ವದ ವಿಶೇಷ ಸಮಿತಿ ರಚಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಸೋಮವಾರ ಸಾಂಕ್ರಾಮಿಕ ರೋಗ ತಡೆ ಕುರಿತು ವಿಡಿಯೋ ಸಂವಾದದ ಮೂಲಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿ ಡೆಂಘೀ, ಮಲೇರಿಯಾ ಪ್ರಕರಣಗಳು ಹೆಚ್ಚಾಗಿಲ್ಲ. ಆದರೂ ರೋಗ ಹರಡುವುದನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಸ್ಥಳೀಯ ಮಟ್ಟದಲ್ಲಿ ಮೇಲ್ವಿಚಾರಣೆ ಉತ್ತಮಗೊಳಿಸಿ ಪರಿಹಾರ ಕಂಡುಕೊಳ್ಳಬೇಕಿದ್ದು, ಹೀಗಾಗಿ ಕ್ಷೇತ್ರವಾರು ವಿಶೇಷ ಸಮಿತಿಗಳನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ.
ಈ ಸಮಿತಿಗಳಿಗೆ ಸ್ಥಳೀಯ ಶಾಸಕರು ಮುಖ್ಯಸ್ಥರಾಗಿರುತ್ತಾರೆ. ಸಮಸ್ಯೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು ಜನಪ್ರತಿನಿಧಿಗಳನ್ನು ಒಳಗೊಂಡ ಈ ಸಮಿತಿಗಳು ನೆರವಾಗಲಿವೆ ಎಂದು ಹೇಳಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ಸಾಂಕ್ರಾಮಿಕ ರೋಗಿಗಳಿಗೆ ಚಿಕಿತ್ಸೆ ನೀಡಿದಲ್ಲಿ ಅದರ ಸಂಪೂರ್ಣ ಮಾಹಿತಿಯನ್ನು ಆರೋಗ್ಯ ಇಲಾಖೆಗೆ ಕಡ್ಡಾಯವಾಗಿ ಸಲ್ಲಿಸಬೇಕು. ರೋಗಿಗಳಿಂದ ಅನಗತ್ಯವಾಗಿ ಹೆಚ್ಚಿನ ಶುಲ್ಕ ವಸೂಲಿ ಮಾಡದಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ರೂಪಿಸಿದ್ದು, ಈ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

