ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ತಾನ್ ರಾಯಲ್ಸ್ ಹಾಗೂ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಐಪಿಎಲ್ ನ 7ನೇ ಪಂದ್ಯ ನಡೆಯಲಿದೆ.
ರಾಜಸ್ಥಾನ ರಾಯಲ್ಸ್ ತಂಡ ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಪೈಪೋಟಿ ನೀಡುವ ಮೂಲಕ ಕೇವಲ 4ರನ್ ಗಳಿಂದ ಸೋಲು ಕಂಡಿತ್ತು. ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅಂದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಏಕಾಂಗಿಯಾಗಿ ಹೋರಾಡಿದರು. ಸಂಜು ಸ್ಯಾಮ್ಸನ್ ಸೇರಿದಂತೆ ಜೋಸ್ ಬಟ್ಲರ್ ಹಾಗೂ ಬೆನ್ ಸ್ಟೋಕ್ಸ್ ರಂತಹ ಸ್ಫೋಟಕ ಬ್ಯಾಟ್ಸ್ ಮನ್ ಗಳು ಈ ತಂಡದಲ್ಲಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಶ್ರೇಯಸ್ ಅಯ್ಯರ್ ಇರದ ಕಾರಣ ವಿಕೆಟ್ ಕೀಪರ್ ರಿಷಬ್ ಪಂತ್ ನಾಯಕನಾಗಿದ್ದು, ಈಗಾಗಲೇ ಮೊದಲ ಪಂದ್ಯದಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಶುಭಾರಂಭ ಮಾಡಿದೆ. ಇಂದು ಎರಡು ತಂಡಗಳಿಂದ ರನ್ ಹೊಳೆ ಹರಿಯುವ ಸಾಧ್ಯತೆ ಹೆಚ್ಚಿದೆ.