ಬೆಂಗಳೂರು: ಬಹುಮಾನ ಪಡೆಯುವಾಗ ಕುಸಿದು ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ 22 ವರ್ಷದ ರಾಬಿನ್ ಸಾವು ಕಂಡವರು ಎಂದು ಹೇಳಲಾಗಿದೆ. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸಲಾಗಿತ್ತು. ಎರಡು, ಮೂರು ಪಂದ್ಯಗಳಲ್ಲಿ ಆಡಿ ರಾಬಿನ್ ತಂಡದ ಗೆಲುವಿಗೆ ಕಾರಣರಾಗಿದ್ದರು. ಪಂದ್ಯದ ಬಳಿಕ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯುವಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ.
ಬಹುಮಾನ ಪಡೆಯುವಾಗ ವೇದಿಕೆ ಮೇಲೆ ರಾಬಿನ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ರಾಬಿನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.