ಮಂಗಳವಾರ ನಡೆದ ಗಬ್ಬಾ ಟೆಸ್ಟ್ ನಲ್ಲಿ ಆತಿಥೇಯ ಆಸ್ಟ್ರೇಲಿಯಾವನ್ನು ಸೋಲಿಸಿ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆದ್ದ ಟೀಮ್ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಟೀಂ ಇಂಡಿಯಾ ವಿರುದ್ಧ ಸೋಲುಂಡ ಆಸ್ಟ್ರೇಲಿಯಾ ಮೂರನೇ ಸ್ಥಾನಕ್ಕೆ ಕುಸಿದಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ 430 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.
ಈ ಚಾಂಪಿಯನ್‌ಶಿಪ್‌ನಲ್ಲಿ ಭಾರತ 13 ಪಂದ್ಯಗಳನ್ನು ಆಡಿತ್ತು. ಅದರಲ್ಲಿ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯ ಡ್ರಾನಲ್ಲಿ ಅಂತ್ಯವಾಗಿತ್ತು. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಭಾರತ ಮೊದಲ ಸ್ಥಾನದಲ್ಲಿದ್ದರೆ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ನ್ಯೂಜಿಲ್ಯಾಂಡ್ ಎರಡನೇ ಸ್ಥಾನದಲ್ಲಿದೆ. ನ್ಯೂಜಿಲ್ಯಾಂಡ್ 420 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 332 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಮೊದಲ ಐದು ಸ್ಥಾನಗಳಲ್ಲಿ ಇಂಗ್ಲೆಂಡ್ ನಾಲ್ಕನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ ಐದನೇ ಸ್ಥಾನದಲ್ಲಿದೆ.
ಅಜಿಂಕ್ಯ ರಹಾನೆ ನೇತೃತ್ವದ ಟೀಮ್ ಇಂಡಿಯಾ ಗಬ್ಬಾ ಟೆಸ್ಟನ್ನು 3 ವಿಕೆಟ್‌ಗಳಿಂದ ಗೆದ್ದು ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಆಸ್ಟ್ರೇಲಿಯಾದ 32 ವರ್ಷದ ಗಬ್ಬಾ ಆಳ್ವಿಕೆಯನ್ನು ಭಾರತ ಕೊನೆಗೊಳಿಸಿದೆ. 1988 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗಬ್ಬಾದಲ್ಲಿ ನಡೆದ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಸೋತಿತ್ತು. ಆ ನಂತ್ರ ಈವರೆಗೂ ಯಾವುದೇ ಪಂದ್ಯವನ್ನು ಸೋತಿರಲಿಲ್ಲ.