ಅಹಮದಾಬಾದ್: ಭಾನುವಾರ ಇಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಕ್ರಿಕೆಟ್ ಫೈನಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಉಪ ಪ್ರಧಾನಿ ರಿಚರ್ಡ್ ಮಾರ್ಲ್ಸ್ ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದ ಭದ್ರತೆ ಮತ್ತು ಇತರ ವ್ಯವಸ್ಥೆಗಳ ಮೇಲ್ವಿಚಾರಣೆಗಾಗಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶುಕ್ರವಾರ ಗಾಂಧಿನಗರದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಉಪ ಪ್ರಧಾನಿ ರಿಚರ್ಡ್ ಮಾರ್ಲ್ಸ್ ಭಾನುವಾರದ ಪಂದ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಪಟೇಲ್ ಅವರು ಉನ್ನತ ಅಧಿಕಾರಿಗಳೊಂದಿಗೆ ಭದ್ರತೆ ಮತ್ತು ಇತರ ವ್ಯವಸ್ಥೆಗಳನ್ನು ಪರಿಶೀಲಿಸಿದರು” ಎಂದು ಪ್ರಕಟಣೆ ತಿಳಿಸಿದೆ.
ಮೈದಾನ, ತಂಡಗಳು, ವಿಐಪಿಗಳ ಭದ್ರತೆ ಮತ್ತು ಸಂಚಾರ ನಿರ್ವಹಣೆಗೆ 4,500 ಸಿಬ್ಬಂದಿಯನ್ನು ನಿಯೋಜಿಸುವುದು ಸೇರಿದಂತೆ ಪಂದ್ಯದ ಸುಗಮ ನಿರ್ವಹಣೆಗೆ ವಿಸ್ತಾರವಾದ ವ್ಯವಸ್ಥೆಗಳ ಕುರಿತು ಪೊಲೀಸ್ ಅಧಿಕಾರಿಗಳು ಸಿಎಂಗೆ ತಿಳಿಸಿದರು.
ವಿಐಪಿ ಸಂಚಾರದಿಂದ ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ, ಮುಚ್ಚಿದ ರಸ್ತೆಗಳು ಮತ್ತು ತಿರುವುಗಳ ಬಗ್ಗೆ ಜನರಿಗೆ ಮುಂಚಿತವಾಗಿ ಸರಿಯಾದ ಮಾಹಿತಿಯನ್ನು ಒದಗಿಸುವಂತೆ ಸೂಚನೆ ನೀಡಿದರು.
ದೇಶ ಮತ್ತು ವಿದೇಶಗಳಿಂದ ನಗರಕ್ಕೆ ಆಗಮಿಸುವ ನಿರೀಕ್ಷೆಯಿರುವ ಅಭಿಮಾನಿಗಳ ಅನುಕೂಲಕ್ಕಾಗಿ ಮೊಟೆರಾ ನಿಲ್ದಾಣದ ಕಡೆಗೆ(ಕ್ರೀಡಾಂಗಣ ಸಮೀಪ) ಓಡುವ ಮೆಟ್ರೋ ರೈಲುಗಳ ಸಂಚಾರ ಹೆಚ್ಚಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.
ಭಾರತ ತಂಡ ಗುರುವಾರ ಸಂಜೆ ಇಲ್ಲಿಗೆ ತಲುಪಿದರೆ, ಆಸ್ಟ್ರೇಲಿಯಾ ತಂಡ ಶುಕ್ರವಾರ ನಗರಕ್ಕೆ ತಲುಪಿತು. ಶುಕ್ರವಾರ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ತಂಡ ಅಭ್ಯಾಸ ನಡೆಸಿತು.
ಭಾರತೀಯ ವಾಯುಪಡೆಯ ಹೆಸರಾಂತ ಸೂರ್ಯ ಕಿರಣ್ ಏರೋಬ್ಯಾಟಿಕ್ಸ್ ತಂಡವು ಭಾನುವಾರದ ಪಂದ್ಯಕ್ಕೂ ಮುನ್ನ ವೈಮಾನಿಕ ಪ್ರದರ್ಶನವನ್ನು ಏರ್ಪಡಿಸಲಿದೆ.