ಬೆಂಗಳೂರು: ಕ್ರೀಡಾಪಟುಗಳಿಗೆ ನೇರ ನೇಮಕಾತಿಯಡಿ ಉದ್ಯೋಗ ನೀಡುವ ಪ್ರಸ್ತಾವನೆಗೆ ಮುಂದಿನ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ರಾಜಭವನದಲ್ಲಿ ಏಕಲವ್ಯ ಕ್ರೀಡಾ ಪ್ರಶಸ್ತಿ ಮತ್ತು ಇತರ ಕ್ರೀಡಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು.
ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ನೇತೃತ್ವದ ಆಯ್ಕೆ ಸಮಿತಿ ಮೂಲಕ ಕ್ರೀಡಾಪಟುಗಳಿಗೆ ನೇರ ನೇಮಕಾತಿಯಡಿ ಸರ್ಕಾರಿ ಉದ್ಯೋಗ ನೀಡುವ ಯೋಜನೆಗೆ ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವುದಾಗಿ ಘೋಷಿಸಿದ್ದಾರೆ.
ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್ ಪದಕ ವಿಜೇತ ಪದವೀಧರ ಕ್ರೀಡಾಪಟುಗಳಿಗೆ ಗ್ರೂಪ್ ಎ ಸರ್ಕಾರಿ ಉದ್ಯೋಗ ನೀಡಲಾಗುವುದು. ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್ ಪದಕ ವಿಜೇತ ಪದವೀಧರರಿಗೆ ಗ್ರೂಪ್ ಬಿ ಉದ್ಯೋಗ ನೀಡಲಾಗುವುದು. ಇದಕ್ಕಿಂತ ಕಡಿಮೆ ಸ್ತರದ ಕ್ರೀಡಾಕೂಟದ ಪದಕ ವಿಜೇತರಿಗೆ ಗ್ರೂಪ್ ಸಿ ಹಾಗೂ ಗ್ರೂಪ್ ಡಿ ಉದ್ಯೋಗ ನೀಡಲಾಗುವುದು. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೀಡುವ ನೀತಿ ಕರ್ನಾಟಕ ರಾಜ್ಯ ಹೊರತುಪಡಿಸಿ ದೇಶದ ಬೇರೆ ರಾಜ್ಯಗಳಲ್ಲಿ ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.