ಅಹಮದಾಬಾದ್: ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ಇಂದು ನಡೆಯಲಿದೆ.
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ 3000 ರನ್ ಗಳಿಸಿದ ಮೊದಲ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಅವರಿಗೆ ಇನ್ನು 72 ರನ್ ಬೇಕಿದೆ. ಇದುವರೆಗೆ 85 ಟಿ20 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 2928 ರನ್ ಗಳಿಸಿದ್ದಾರೆ.
ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಕೊಹ್ಲಿ ಮೊದಲ ಸ್ಥಾನದಲ್ಲಿ ಇದ್ದಾರೆ. ಅವರು ಇನ್ನು 72 ರನ್ ಗಳಿಸಿದರೆ 3000 ರನ್ ಗಳಿಸಿದ ಮೊದಲ ಬ್ಯಾಟ್ಸ್ ಮನ್ ಆಗಲಿದ್ದಾರೆ. ನ್ಯೂಜಿಲೆಂಡ್ ತಂಡದ ಮಾರ್ಟಿನ್ ಗಪ್ಟಿಲ್ 99 ಪಂದ್ಯಗಳಿಂದ 2839 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಭಾರತದ ರೋಹಿತ್ ಶರ್ಮಾ 108 ಪಂದ್ಯಗಳಿಂದ 2773 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಅಂದ ಹಾಗೆ, ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಟಿ20ಯಲ್ಲಿ ಇದುವರೆಗೆ ಶತಕ ಗಳಿಸಿಲ್ಲ.