ಪುಣೆ: ಬಾಂಗ್ಲಾದೇಶ ವಿರುದ್ಧ ಪುಣೆಯಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯಗಳಿಸಿದೆ. ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಅಜೇಯ 103 ರನ್ ಗಳಿಸಿದ್ದಾರೆ.
ಇದರೊಂದಿಗೆ ವಿರಾಟ್ ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 26 ಸಾವಿರ ರನ್ ಕ್ಲಬ್ ಸೇರಿಕೊಂಡಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅವರು 26,026 ರನ್ ಗಳಿಸಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ಬ್ಯಾಟರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಗರಿಷ್ಠ ರನ್ ಗಳಿಸಿದವರ ಪಟ್ಟಿಯಲ್ಲಿ ಶ್ರೀಲಂಕಾದ ಜಯವರ್ಧನೆ(25,957) ಅವರನ್ನು ವಿರಾಟ್ ಕೊಹ್ಲಿ ಹಿಂದಿಕ್ಕಿದ್ದಾರೆ. ವೇಗದ 26,000 ರನ್ ಗಳಿಕೆಯಲ್ಲಿ ದಾಖಲೆ ನಿರ್ಮಿಸಿದ್ದಾರೆ. ಅವರು 577 ಇನಿಂಗ್ಸ್ ಗಳಲ್ಲಿ ಈ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸಚಿನ್ ತೆಂಡೂಲ್ಕರ್ 601 ಇನಿಂಗ್ಸ್ ನಲ್ಲಿ ಈ ಸಾಧನೆ ಮಾಡಿದ್ದಾರೆ.
ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಪ್ರಸ್ತುತ ಸಚಿನ್ ತೆಂಡೂಲ್ಕರ್(34,357) ಸಂಗಕ್ಕಾರ(28,016), ರಿಕಿ ಪಾಂಟಿಂಗ್(27,483) ಮೊದಲ ಮೂರು ಸ್ಥಾನಗಳಲ್ಲಿದ್ದಾರೆ.
ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ 48ನೇ ಶತಕ ಸಿಡಿಸಿದ್ದು, ಸಚಿನ್ ತೆಂಡೂಲ್ಕರ್ ಅವರ 49 ಶತಕಗಳ ದಾಖಲೆ ಸರಿಗಟ್ಟಲು ಇನ್ನೊಂದು ಶತಕ ಬೇಕಿದೆ. ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ 78 ಶತಕ ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ 100 ಶತಕ ದಾಖಲೆ ಸರಿಗಟ್ಟಲು ಕೊಹ್ಲಿಗೆ ಇನ್ನೂ 22 ಶತಕ ಬೇಕಿದೆ.