ಮಂಡ್ಯ-ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಅಕ್ಟೋಬರ್ 15ರಂದು ವಿಧ್ಯುಕ್ತವಾಗಿತತ್ವ ಉದ್ಘಾಟನೆಗೊಳ್ಳಲಿದ್ದು, ಅಕ್ಟೋಬರ್ 18ರಂದು ಸಮಾರೋಪಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಶ್ರೀರಂಗಪಟ್ಟಣ ದಸರಾ ಆಚರಣೆ ಸಂಬಂಧ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಉನ್ನತ ಮಟ್ಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶ್ರೀರಂಗಪಟ್ಟಣ ದಸರಾ ಮಹೋತ್ಸವದ ನಿರ್ವಹಣೆ
ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ್ದರೂ, ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಶ್ರೀರಂಗಪಟ್ಟಣ ದಸರಾವನ್ನು ಯಾವುದೇ ಕಾರಣಕ್ಕೂ ಕಡೆಗಣಿಸುವಂತಿಲ್ಲ. ಕಳೆದ ಬಾರಿಯಂತೆ ಈ ಬಾರಿಯೂ ಅದ್ದೂರಿಯಾಗಿಯೇ ಆಚರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮಗಳಲ್ಲಿ ಯಾವುದೇ ಕಡಿತ ಮಾಡಬಾರದು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಉತ್ಸವಕ್ಕೆ ಅನುದಾನದ ಕೊರತೆಯಾಗದಂತೆ ಕ್ರಮವಹಿಸಲಾಗುವುದು. ಕಳೆದ ಬಾರಿ ಮೂರು ಇಲಾಖೆಗಳಿಂದ ಒಟ್ಟು 2 ಕೋಟಿ ರೂ. ಅನುದಾನ ಒದಗಿಸಲಾಗಿತ್ತು. ಈ ಭಾರಿ ಕಳೆದ ಭಾರಿಗಿಂತ ಅನುದಾನ ಕಡಿಮೆಯಾಗುವುದಿಲ್ಲ. ಜನಪ್ರತಿನಿಧಿಗಳ ಸಲಹೆಗಳನ್ನು ಪರಿಗಣಿಸಿ, ಶ್ರೀರಂಗಪಟ್ಟಣದ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಪರಸ್ಪರ ಚರ್ಚಿಸಿ ಉತ್ಸವದ ಉದ್ಘಾಟಕರನ್ನು ಅಂತಿಮಗೊಳಿಸಬೇಕು ಎಂದು ಅವರು ನಿರ್ದೇಶಿಸಿದರು.
ಯುವ ಸಂಭ್ರಮ ಕಾರ್ಯಕ್ರಮ
ಜತೆಗೆ, ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ಮೈಸೂರು ಮಾದರಿಯಲ್ಲೇ ದಸರಾ ಆರಂಭಕ್ಕೂ ಎರಡು ದಿನ ಮುನ್ನ ‘ಯುವ ಸಂಭ್ರಮ’ ಕಾರ್ಯಕ್ರಮವನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ. ಕುಮಾರ್, ಉತ್ಸವದ ಯಶಸ್ವಿ ನಿರ್ವಹಣೆಗಾಗಿ ಈಗಾಗಲೇ 12 ಸಮಿತಿಗಳನ್ನು ರಚಿಸಲಾಗಿದೆ ಎಂದು ವಿವರಿಸಿದರು. ಅಗತ್ಯ ಅನುದಾನಕ್ಕಾಗಿ ಸರ್ಕಾರಕ್ಕೆ ಹಾಗೂ ಮೈಸೂರು ದಸರಾ ಸಮಿತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಉತ್ಸವದ ಮೆರವಣಿಗೆಗೆ ಆನೆಗಳನ್ನು ಕಳುಹಿಸಿಕೊಡುವಂತೆ ಕೋರಿ ಪತ್ರ ಬರೆಯಲಾಗಿದೆ. ಈ ಬಾರಿಯ ವಿಶೇಷ ಆಕರ್ಷಣೆಯಾಗಿ ಪ್ರಥಮ ಬಾರಿಗೆ ಯುವ ಸಂಭ್ರಮ, ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಮಳಿಗೆಗಳು ಹಾಗೂ ಆಹಾರ ಮೇಳವನ್ನು ಆಯೋಜಿಸಲು ಯೋಜನೆ ರೂಪಿಸಲಾಗಿದೆ ಎಂದು ಅವರು ಸಭೆಯ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

