ಹಾವೇರಿ: ನವೆಂಬರ್ ನಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ತಿಳಿಸಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ನಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಸಚಿವ ಸ್ಥಾನ ಕಳೆದುಕೊಂಡವರಿಗೆ ಪಕ್ಷದಲ್ಲಿ ಸ್ಥಾನ ನೀಡಲಾಗುವುದು. ಆದರೆ, ಅಂತಿಮವಾಗಿ ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳು ಇದನ್ನು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಬೇಕೆಂಬುದರ ಬಗ್ಗೆ ಕೆಲವು ಸಚಿವರು ಹೇಳುತ್ತಿರುವ ಕುರಿತಾಗಿ ನನಗೆ ಗೊತ್ತಿಲ್ಲ. ಎಐಸಿಸಿ ಅಧ್ಯಕ್ಷರು ನಮಗೆ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತನಾಡದಂತೆ ತಿಳಿಸಿದ್ದಾರೆ. ಈ ಕುರಿತು ನಾವು ಏನೂ ಮಾತನಾಡುವುದಿಲ್ಲ. ಕಾಂಗ್ರೆಸ್ ಪ್ರಜಾಪ್ರಭುತ್ವ ಇರುವ ಪಾರ್ಟಿ. ಪಕ್ಷದಲ್ಲಿ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ, ವಿಶ್ಲೇಷಣೆ ಮಾಡಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಲೀಂ ಅಹಮದ್ ಹೇಳಿದ್ದಾರೆ.