ಬೆಂಗಳೂರು : ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಹಂತದ ಕಸರತ್ತು ನಡೆಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಹಿರಿಯ ನಾಯಕರು ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರೊಂದಿಗೆ ಮಹತ್ವದ ಸಭೆ ನಡೆಸಲಿದ್ದು, ಸಚಿವ ಸ್ಥಾನಾಕಾಂಕ್ಷಿಗಳ ಅಂತಿಮ ಪಟ್ಟಿಗೆ ಈ ಸಭೆಯಲ್ಲೇ ಮುದ್ರೆ ಬೀಳುವ ಸಾಧ್ಯತೆ ಇದೆ. ಜುಲೈ 20ರೊಳಗೆ ಸಚಿವ ಸಂಪುಟ ವಿಸ್ತರಣೆ ನಡೆಯಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಜೋರಾಗಿವೆ.
ಜುಲೈ 18 ರಂದು ಸಂಜೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಜುಲೈ 19 ರಿಂದ 2 ದಿನ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಾತುಕತೆ ನಡೆಯುವ ಸಾಧ್ಯತೆಯಿದೆ. ಜುಲೈ 21 ರಂದು ಹೊಸ ಸಚಿವರು ಪ್ರಮಾಣ ವವನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.
ಮೂಲಗಳ ಪ್ರಕಾರ, ಪ್ರಾದೇಶಿಕ ಸಮತೋಲನ, ಜಾತಿ ಸಮೀಕರಣ, ಹಿರಿಯರಿಗೆ ಆದ್ಯತೆ ಹಾಗೂ ಹೊಸ ಮುಖಗಳಿಗೆ ಅವಕಾಶ ನೀಡುವ ಅಂಶಗಳನ್ನು ಪರಿಗಣಿಸಿ ಸಚಿವರ ಆಯ್ಕೆ ನಡೆಯಲಿದೆ. ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ನಡೆಯುವ ಸಭೆಯ ಬಳಿಕ ಅಂತಿಮ ಪಟ್ಟಿಗೆ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. ಈ ಬೆಳವಣಿಗೆಗಳಿಂದ ಸಚಿವ ಸ್ಥಾನಾಕಾಂಕ್ಷಿಗಳಲ್ಲಿ ತೀವ್ರ ಕುತೂಹಲ ಮೂಡಿದ್ದು, ಸಂಪುಟ ವಿಸ್ತರಣೆಯ ದಿನಾಂಕದ ಕುರಿತು ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.
ಸಚಿವ ಸಂಪುಟ ವಿಸ್ತರಣೆಗೆ ನನ್ನಿಂದ ಯಾವುದೇ ವಿಳಂಬ ಇಲ್ಲ: ಸಿಎಂ ಡಿ.ಕೆ. ಶಿವಕುಮಾರ್
ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ತಮ್ಮ ಕಡೆಯಿಂದ ಯಾವುದೇ ವಿಳಂಬವಾಗಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಮಯ ನೀಡಿದ ಕೂಡಲೇ ದೆಹಲಿಗೆ ತೆರಳಿ ಚರ್ಚೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, “ಆಗಸ್ಟ್ 6ರಂದು ವಿಧಾನಸಭೆ ಅಧಿವೇಶನ ಕರೆಯುವುದು ಈಗ ನನ್ನ ಮೊದಲ ಆದ್ಯತೆ. ಹೈಕಮಾಂಡ್ ಯಾವಾಗ ಸಮಯ ಕೊಡುತ್ತದೆಯೋ ಆಗ ದೆಹಲಿಗೆ ಹೋಗುತ್ತೇನೆ. ಇನ್ನೂ ಮೂರು-ನಾಲ್ಕು ದಿನಗಳಲ್ಲಿ ದಿನಾಂಕ ತಿಳಿಸುವ ಸಾಧ್ಯತೆಯಿದೆ. ನಂತರ ದೆಹಲಿಗೆ ತೆರಳಿ ಚರ್ಚೆ ನಡೆಸಿ ವಾಪಸ್ ಬರುತ್ತೇನೆ” ಎಂದರು.
ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿ 14 ಮಂದಿ ಸಚಿವರಿದ್ದು, ಸಂವಿಧಾನ ಪ್ರಕಾರ 34 ಸಚಿವರನ್ನು ನೇಮಕ ಮಾಡುವ ಅವಕಾಶವಿದೆ. ಹೀಗಾಗಿ ಇನ್ನೂ 20 ಸಚಿವ ಸ್ಥಾನಗಳು ಖಾಲಿ ಇವೆ. ಇದೇ ಕಾರಣಕ್ಕೆ ಹಿರಿಯ ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕಾವೇರಿ ನೀರು ಬಿಡುಗಡೆ ಕುರಿತು ಜುಲೈ 15ರಂದು ನಿರ್ಧಾರ
ಕಾವೇರಿ ನೀರು ಬಿಡುಗಡೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮನ್ನು ಭೇಟಿ ಮಾಡಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ಹೇಳಿದರು.
“ಜುಲೈ 15ರಂದು ಸಭೆ ನಡೆಯಲಿದೆ. ತಮಿಳುನಾಡಿಗೆ ಸಂಬಂಧಿಸಿದ ನ್ಯಾಯಾಧಿಕರಣದ ನಿರ್ದೇಶನಗಳನ್ನು ಪಾಲಿಸುವ ಜವಾಬ್ದಾರಿಯೂ ಇದೆ. ಅದೇ ವೇಳೆ ಮಂಡ್ಯ ರೈತರ ಹಿತಾಸಕ್ತಿ ಹಾಗೂ ಕುಡಿಯುವ ನೀರಿನ ಅಗತ್ಯವನ್ನೂ ಗಮನದಲ್ಲಿಟ್ಟುಕೊಂಡು ಸಭೆಯಲ್ಲೇ ರಾಜ್ಯದ ನಿಲುವು ಮಂಡಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

