HomeKarnatakaBIG NEWS: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ಕಡೆಗಣನೆಗೆ ಆಕ್ರೋಶ: ಪ್ರಧಾನಿ ಅಧ್ಯಕ್ಷತೆಯ ನೀತಿ ಆಯೋಗದ...

BIG NEWS: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ಕಡೆಗಣನೆಗೆ ಆಕ್ರೋಶ: ಪ್ರಧಾನಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆ ಬಹಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ಕಡೆಗಣನೆಗೆ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ಧರಾಮಯ್ಯ ಅವರು ಪ್ರಧಾನಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆ ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.

ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಇಂದು ಮಂಡಿಸಲಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಸಿಎಂ ದೂರಿದ್ದಾರೆ.

ಕೇಂದ್ರ ಸರ್ಕಾರದ ಈ ಉದ್ದೇಶಪೂರ್ವ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ, ಇದೇ ಜುಲೈ ತಿಂಗಳ 27ರಂದು ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗಳವಾರ ಮಂಡಿಸಲಾದ 2024-25ರ ಸಾಲಿನ ಬಜೆಟ್ ನೋಡಿದ ನಂತರ ನಮಗೆ ಕೇಂದ್ರ ಸರ್ಕಾರದ ಮೇಲಿನ ವಿಶ‍್ವಾಸವೇ ಹೊರಟುಹೋಗಿದೆ. ಬಜೆಟ್ ನಲ್ಲಿ ರೈತರ ಕಲ್ಯಾಣದ ಕಾಳಜಿ ವ್ಯಕ್ತಪಡಿಸಿರುವ ಹಣಕಾಸು ಸಚಿವರು ನಮ್ಮ ಬಹುದಿನಗಳ ಬೇಡಿಕೆಯಾಗಿರುವ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ. ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ -ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ  ಯೋಜನೆ ಮತ್ತು ಬೆಂಗಳೂರು ನಗರದ ಉದ್ದೇಶಿತ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ಅಗತ್ಯ ಅನುಮತಿ ಮತ್ತು ಅನುದಾನವನ್ನೂ ನೀಡಿಲ್ಲ.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಸೂಚನೆ ಕೂಡಾ ಬಜೆಟ್ ನಲ್ಲಿ ಇಲ್ಲ. ಕೇಂದ್ರ ಸರ್ಕಾರದ ತಾರತಮ್ಯ ನೀತಿಯನ್ನು ಸೂಕ್ಷ್ಮವಾಗಿ ಅವಲೋಕಸಿದರೆ ಬಿಜೆಪಿಯನ್ನು ತಿರಸ್ಕರಿಸಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ನರೇಂದ್ರ ಮೋದಿ ಅವರ ಸರ್ಕಾರ ನಿರ್ಧಾರ ಮಾಡಿದಂತಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿವೆ ಎನ್ನುವುದನ್ನು ನರೇಂದ್ರ ಮೋದಿ ಸರ್ಕಾರ ಮರೆತಂತಿದೆ. ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಸುರಿದಿರುವ ವಿಶೇಷ ಅನುದಾನದ ಸುರಿಮಳೆಯನ್ನು ನೋಡಿದರೆ ನರೇಂದ್ರ ಮೋದಿಯವರ ಲೆಕ್ಕಾಚಾರದಲ್ಲಿ ಆ ಎರಡು ರಾಜ್ಯಗಳು ಮಾತ್ರ ಅಸ್ತಿತ್ವದಲ್ಲಿರುವ ಹಾಗೆ ಕಾಣುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ ಎಂದು ಟೀಕಿಸಿದ್ದಾರೆ.

ಈ ಅನ್ಯಾಯವನ್ನು ಸಹಿಸಲಾಗದು. ಈ ರೀತಿ ನಿರ್ಲಕ್ಷ್ಯಕ್ಕೊಳಗಾಗಿರುವ ಬಿಜೆಪಿಯೇತರ ಪಕ್ಷಗಳ ಆಡಳಿತದ ರಾಜ್ಯಗಳ ಜೊತೆ ಸೇರಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಸೇಡಿನ ರಾಜಕಾರಣದ ವಿರುದ್ಧ ಹೋರಾಟ ನಡೆಸಲಾಗುವುದು. ಈ ಹೋರಾಟದಲ್ಲಿ ಕೇಂದ್ರ ಸರ್ಕಾರದ ಕರ್ನಾಟಕ ವಿರೋಧಿ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ರಾಜ್ಯದ ಜನತೆ ನಮ್ಮ ಜೊತೆ ನಿಲ್ಲಲಿದ್ದಾರೆ ಎಂಬ ಭರವಸೆ ನನಗಿದೆ ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular