ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಮಳೆ ಮುಂದುವರೆದಿದೆ. ಭಾನುವಾರ ಕೊಡಗು ಸೇರಿ ರಾಜ್ಯದ 5 ಜಿಲ್ಲೆಗಳಲ್ಲಿ ಮಳೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆ ಕುರುಬರಹಳ್ಳಿಯಲ್ಲಿ ಸಿಡಿಲು ಬಡಿದು ನಾಗಮ್ಮ(65) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಮಂಗಳೂರು ಮೂಡಿಗೆರೆ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ, ಬೇಗೂರು, ಕೊಡಗರಹಳ್ಳಿ ಮತ್ತಿಕಾಡು ಸೇರಿ ಹಲವು ಕಡೆ ಗುಡುಗು ಸಹಿತ ಮಳೆಯಾಗಿದೆ.
ಸಂಡೂರಿನಲ್ಲಿ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಬೀದರ್, ಕೋಲಾರ, ಕೊಪ್ಪಳ ಸೇರಿ ಹಲವು ಕಡೆ ಮಳೆಯಾಗಿದೆ.
ರಾಜ್ಯದಲ್ಲಿ ಇನ್ನೂ ಎರಡು ದಿನ ಮುಂಗಾರುಪೂರ್ವ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲ್ಲದೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ವಿವಿಧೆಡೆ ಕಳೆದ ಎರಡು ದಿನ ಮುಂಗಾರು ಪೂರ್ವ ಮಳೆ ಅಬ್ಬರಿಸಿದೆ. ಸೋಮವಾರ ಮತ್ತು ಮಂಗಳವಾರ ಕೂಡ ಮಳೆಯ ಅಬ್ಬರ ಮುಂದುವರೆಯಲಿದೆ.
ಶಿವಮೊಗ್ಗ, ದಾವಣಗೆರೆ ಹೊರತುಪಡಿಸಿ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಗದಗ, ಬೀದರ್, ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಲಿದೆ. ಮಳೆಯ ಜೊತೆಗೆ ಪ್ರಬಲವಾದ ಗಾಳಿ, ಗುಡಗು, ಮಿಂಚನ ಆರ್ಭಟ ಕೂಡ ಇರಲಿದೆ ಎಂದು ಹೇಳಲಾಗಿದೆ.