ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸ್ಟಿಂಗ್ ಆಪರೇಷನ್ ಕಿಂಗ್ಪಿನ್ ಬಂಧಿಸಲು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೀಡಿದ್ದ ಡೆಡ್ಲೈನ್ ಅಂತ್ಯವಾಗಿರುವ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಕಾರ್ಯಕರ್ತರು ಡಿಜಿ-ಐಜಿಪಿ ಕಚೇರಿಗೆ ಪಾದಯಾತ್ರೆ ಮೂಲಕ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದರು.
ಜೆಡಿಎಸ್ ಕಾರ್ಯಕರ್ತರ ಜೊತೆ ಹೆಚ್.ಡಿ.ಕುಮಾರಸ್ವಾಮಿ ಕೂಡ ಬೀದಿಗಿಳಿದಿದ್ದು, ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಡಿಜಿ-ಐಜಿಪಿ ಕಚೇರಿ ಮುಂದೆ ಹೈಡ್ರಾಮಾ ನಡೆಯಿತು.
ಇದಕ್ಕೂ ಮುನ್ನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಿದ ಕೇಂದ್ರ ಸಚಿವ ಕುಮಾರಸ್ವಾಮಿ, ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಮುಕ್ತ ಅವಕಾಶ ನೀಡುತ್ತಿಲ್ಲ. ಆರೋಪಿ ಬಂಧನಕ್ಕೆ ನಾನು ಎರಡು ದಿನಗಳ ಗಡುವು ನೀಡಿದ್ದೆ. ಗಡುವು ಈಗ ಮುಕ್ತಾಯವಾಗಿದೆ. ಡೆಡ್ ಲೈನ್ ಮುಗಿದರೂ ಈವರೆಗೂ ಪೊಲೀಸರು ಸ್ಟಿಂಗ್ ಆರೋಪಿಯನ್ನು ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರವೇ ಸ್ಟಿಂಗ್ ಆರೋಪಿಯನ್ನು ರಕ್ಷಣೆ ಮಾಡುತ್ತಿದೆ. ಈ ಬಗ್ಗೆ ಹೇಳಿದರೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನನ್ನ ಬಗ್ಗೆಯೇ ವ್ಯಂಗ್ಯವಡಿದ್ದಾರೆ. ಸಿಎಂ ಡಿ.ಕೆ.ಶಿವಕುಮಾರ್ ಪದೇ ಪದೇ ಸ್ಟಿಂಗ್ ಆರೋಪಿಯನ್ನು ಭೇಟಿಯಾಗಿದ್ದಾರೆ. ಆರೋಪಿ ನಿನ್ನೆಯಷ್ಟೇ ತಾನೇ ವಿಡಿಯೋ ಮಾಡಿದ್ದು ಎಂದು ಒಪ್ಪಿಕೊಂಡಿದ್ದಾನೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಆತನನ್ನು ಬಂಧಿಸಿ ತನಿಖೆ ನಡೆಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಯಾವುದೇ ವೈಯಕ್ತಿಕ ಹೋರಾಟ ನಡೆಸುತ್ತಿಲ್ಲ. ಹಬ್ಬದ ಬಳಿಕ ಈ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ತಿಳಿಸಿದರು.
ಬಳಿಕ ಫ್ರೀಡಂ ಪಾರ್ಕ್ ನಿಂದ ನೃಪತುಂಗ ರಸ್ತೆವರೆ ಪಾದಯಾತ್ರೆಯಲ್ಲಿ ಆಗ್ರಮಿಸಿದ ಜೆಡಿಎಸ್ ಕಾರ್ಯಕರ್ಯರು ಡಿಜಿ=ಐಜಿಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಬ್ಯಾರಿಕೇಡ್ ಗಳನ್ನು ಅಳವಡಿಸಿ ತಡೆದರು. ಇದೇ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಡಿಜಿ-ಐಜಿಪಿ ಕಚೇರಿಗೆ ಆಗಮಿಸಿದರು.
ಡಿಜಿ-ಐಜಿಪಿ ಡಾ.ಸಲೀಂ ಅವರೊಂದಿಗೆ ಚರ್ಚೆ ನಡೆಸಿದರು. ಸ್ಟಿಂಗ್ ಆಪರೇಷನ್ ಆರೋಪಿಯನ್ನು ತಕ್ಷಣ ಬಂಧಿಸಬೇಕು. ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮನವಿ ಪತ್ರ ನೀಡಿದರು.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ಡಿಢೀರ್ ರಾಜೀನಾಮೆ: ಕಾರಣವೇನು?
ಬೆಂಗಳೂರು: ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ಅವರು ದಿಢೀರ್ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ.
ಸೌಮ್ಯಾ ರೆಡ್ಡಿ ಅವರು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಏಕಾಏಕಿ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ಪಾಳಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಪಕ್ಷ ಸಂಘಟನೆ ಮಾಡುವುದಾಗಿ ಹಾಗೂ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತಳಾಗಿ ಕಾರ್ಯನಿರ್ವಹಿಸುವುದಾಗಿ ಸೌಮ್ಯಾ ರೆಡ್ಡಿ ತಿಳಿಸಿದ್ದಾರೆ.
ರಾಜ್ಯದ ಸಚಿವ ಸಂಪುಟದಲ್ಲಿ ಒಬ್ಬರೂ ಮಹಿಳಾ ಸಚಿವರೇ ಇಲ್ಲದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸೌಮ್ಯಾ ರೆಡ್ಡಿ ಅವರು ಎಐಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನಮಾನ ನೀಡಿಲ್ಲ ಎಂಬ ಅಸಮಾಧನ ಈ ಮೊದಲ್ಲೇ ಕಾಂಗ್ರೆಸ್ನಲ್ಲಿ ಇತ್ತು. ಅದರೂ ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಯಾವುದೇ ಕ್ರಮವನ್ನು ತೆಗೆದುಕೊಂಡಿರಲಿಲ್ಲ. ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕೂಡ ಇದಕ್ಕೆ ನಾನೇ ಕಾರಣ ಎಂಬ ಅಚ್ಚರಿಯ ಹೇಳಿಕೆಯನ್ನು ಕೂಡ ನೀಡಿದ್ದರು. ಈ ಎಲ್ಲ ಗೊಂದಲದ ಬಳಿಕ ಮಹಿಳೆಯರಿಗೆ ಸಚಿವ ಸ್ಥಾನ ನೀಡುತ್ತೇವೆ ಎಂಬ ಭರವಸೆಯನ್ನು ಹೈಕಮಾಂಡ್ ನೀಡಿತ್ತು. ಆದರೆ ಇಲ್ಲಿಯವರೆಗೂ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ಸಿಕ್ಕಿಲ್ಲ. ಇದೀಗ ಇದರಿಂದ ಅಸಮಾಧನಗೊಂಡು ಸೌಮ್ಯಾ ರೆಡ್ಡಿ ಅವರು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

