ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಪ್ರಮುಖ ಆರೋಪಿಯನ್ನು ಎರಡು ದಿನಗಳೊಳಗೆ ಬಂಧಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಪೊಲೀಸರಿಗೆ ಗಡುವು ನೀಡಿದ್ದಾರೆ. ನಿಗದಿತ ಅವಧಿಯಲ್ಲಿ ಬಂಧನವಾಗದಿದ್ದರೆ ದೊಡ್ಡ ಮಟ್ಟದ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯ ಮೆಟ್ಟಿಲಲ್ಲೇ ಧರಣಿ
ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಮತ್ತು ಪ್ರಮುಖ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಕುಮಾರಸ್ವಾಮಿ ಅವರು ಬೆಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದರು. ಬಳಿಕ ಕಚೇರಿಯ ಮೆಟ್ಟಿಲುಗಳ ಮೇಲೆಯೇ ಕುಳಿತು ಧರಣಿ ನಡೆಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ನ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯಕರ್ತರಾದ ಶಂಕರ್ ಮತ್ತು ಮೋಹನ್ ಅವರನ್ನು ಪೊಲೀಸರು ವಿಚಾರಣೆಗೆ ವಶಕ್ಕೆ ಪಡೆದಿರುವುದಕ್ಕೆ ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕಾರ್ಯಕರ್ತರನ್ನು ವಶಕ್ಕೆ ಪಡೆಯುವಾಗ ನೋಟಿಸ್ ನೀಡಿಲ್ಲ ಹಾಗೂ ಅವರ ಕುಟುಂಬಕ್ಕೆ ಸೂಕ್ತ ಮಾಹಿತಿ ನೀಡಿಲ್ಲ ಎಂದು ಆರೋಪಿಸಿದರು.
‘ಮೂಲ ಆರೋಪಿಯನ್ನು ಬಂಧಿಸಿ, ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ’
ಪ್ರಕರಣದಲ್ಲಿ ನಿಜವಾದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಜೆಡಿಎಸ್ ಕಾರ್ಯಕರ್ತರನ್ನು ಗುರಿಯಾಗಿಸಲಾಗುತ್ತಿದೆ ಎಂಬುದು ಕುಮಾರಸ್ವಾಮಿ ಅವರ ಆರೋಪವಾಗಿದೆ. ಸ್ಟಿಂಗ್ ಆಪರೇಷನ್ನ ಹಿಂದಿರುವ ಪ್ರಮುಖ ವ್ಯಕ್ತಿ ರಾಕೇಶ್ ಶೆಟ್ಟಿ ಅವರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ತನಿಖೆಗೆ ತಾನು ಸಂಪೂರ್ಣ ಸಹಕಾರ ನೀಡಲು ಸಿದ್ಧನಿದ್ದೇನೆ. ಅಗತ್ಯವಿದ್ದರೆ ವಿಚಾರಣೆಗೂ ಹಾಜರಾಗುತ್ತೇನೆ. ಆದರೆ, ಪ್ರಕರಣದ ಮೂಲ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳದೆ ಹೋದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಎರಡು ದಿನಗಳಲ್ಲಿ ಬಂಧನವಾಗದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ
ಕುಮಾರಸ್ವಾಮಿ ಅವರ ಧರಣಿಯನ್ನು ಅಂತ್ಯಗೊಳಿಸಲು ಪೊಲೀಸ್ ಆಯುಕ್ತರು ಮನವೊಲಿಸಲು ಪ್ರಯತ್ನಿಸಿದರು. ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ತನಿಖೆಗೆ ಒಳಪಡಿಸಲಾಗುವುದು ಮತ್ತು ಪ್ರಾಮಾಣಿಕವಾಗಿ ತನಿಖೆ ನಡೆಸಲಾಗುವುದು ಎಂದು ಆಯುಕ್ತರು ಭರವಸೆ ನೀಡಿದ ಬಳಿಕ ಕುಮಾರಸ್ವಾಮಿ ಧರಣಿ ಕೈಬಿಟ್ಟರು.
ಆದರೆ, ಎರಡು ದಿನಗಳೊಳಗೆ ಪ್ರಕರಣದ ಪ್ರಮುಖ ಆರೋಪಿಯ ಬಂಧನವಾಗದಿದ್ದರೆ ಮುಂದಿನ ಹೋರಾಟದ ಬಗ್ಗೆ ದೊಡ್ಡ ಮಟ್ಟದ ನಿರ್ಧಾರ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.
ಒಟ್ಟಿನಲ್ಲಿಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಈಗಾಗಲೇ ರಾಜಕೀಯ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿದ್ದು, ಪ್ರಮುಖ ಆರೋಪಿಯ ಬಂಧನಕ್ಕೆ ಕುಮಾರಸ್ವಾಮಿ ನೀಡಿರುವ ಎರಡು ದಿನಗಳ ಗಡುವು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಪೊಲೀಸರ ಮುಂದಿನ ಕ್ರಮದ ಮೇಲೆ ಎಲ್ಲರ ಗಮನ ನೆಟ್ಟಿದೆ.
*ಮಹಿಳಾ ಪತ್ರಕರ್ತರ ಮೇಲಿನ ಹಲ್ಲೆ ಆರೋಪ: ‘ರೀಲ್ಸ್ ಮಾಡುವವರು ಯಾರು, ಪತ್ರಕರ್ತರು ಯಾರು ಎಂಬುದೇ ಗೊತ್ತಾಗುತ್ತಿಲ್ಲ’ ಎಂದ ಕೇಂದ್ರ ಸರ್ಕಾರ
ದೆಹಲಿಯ ಜಂತರ್ ಮಂತರ್ನಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗಳನ್ನು ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ಹೇಳಿಕೆ ನೀಡಿದೆ.
ತಂತ್ರಜ್ಞಾನದ ಈ ಯುಗದಲ್ಲಿ ಮೊಬೈಲ್ ಹೊಂದಿರುವ ಯಾರೇ ಬೇಕಾದರೂ ಪತ್ರಕರ್ತರಾಗಬಹುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ. ಪ್ರತಿಭಟನೆಗಳನ್ನು ವರದಿ ಮಾಡುವವರಲ್ಲಿ ಪತ್ರಕರ್ತರು ಯಾರು, ರೀಲ್ಸ್ ಮಾಡುವವರು ಯಾರು ಎಂಬುದನ್ನು ಗುರುತಿಸುವುದು ಕಷ್ಟವಾಗುತ್ತಿದೆ ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.
ಮಹಿಳಾ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಕೋರಿ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಹೇಳಿಕೆ ಬಂದಿದೆ.
ಜಂತರ್ ಮಂತರ್ನಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗಳನ್ನು ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ದೆಹಲಿ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ತನಿಖೆಗೆ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ಚಿಂತನೆ
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಮಹಿಳಾ ಪತ್ರಕರ್ತರ ಮೇಲಿನ ಹಲ್ಲೆ ಮತ್ತು ಲೈಂಗಿಕ ಕಿರುಕುಳದ ಆರೋಪಗಳ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸುವ ಸಾಧ್ಯತೆಯನ್ನು ಪರಿಶೀಲಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಾದ ಮಂಡಿಸಿದ ತುಷಾರ್ ಮೆಹ್ತಾ, ಮೈಕ್ ಹಿಡಿದುಕೊಂಡು ತಾವು ವಿಡಿಯೋ ರೆಕಾರ್ಡ್ ಮಾಡುತ್ತಿದ್ದೇವೆ ಎಂದು ಹೇಳುವ ಕೆಲವರು ಬಳಿಕ ಅದನ್ನು ರೀಲ್ಸ್ ರೂಪದಲ್ಲಿ ಅಪ್ಲೋಡ್ ಮಾಡುತ್ತಾರೆ. ಹೀಗಾಗಿ ಸ್ವತಂತ್ರ ಪತ್ರಕರ್ತರು ಯಾರು, ರೀಲ್ಸ್ ಸೃಷ್ಟಿಸುವವರು ಯಾರು ಎಂಬುದನ್ನು ಗುರುತಿಸುವುದು ಸುಲಭವಲ್ಲ ಎಂದು ಹೇಳಿದ್ದಾರೆ.
ಆದರೆ, ಮಹಿಳೆಯರ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವ ಯಾವುದೇ ವರ್ತನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂಬುದನ್ನೂ ಅವರು ಸ್ಪಷ್ಟಪಡಿಸಿದ್ದಾರೆ. ಮಹಿಳಾ ಪೊಲೀಸ್ ಸಿಬ್ಬಂದಿ ಸೇರಿದಂತೆ ಯಾವುದೇ ಮಹಿಳೆಯ ವಿರುದ್ಧ ಅಸಭ್ಯವಾಗಿ ವರ್ತಿಸುವುದು ಅಥವಾ ಅವರನ್ನು ಕೆಟ್ಟದಾಗಿ ನಡೆಸಿಕೊಳ್ಳುವುದು ಸ್ವೀಕಾರಾರ್ಹವಲ್ಲ ಎಂದು ತಿಳಿಸಿದ್ದಾರೆ.

