ಬಳ್ಳಾರಿ: ಸರ್ಕಾರಿ ಜಮೀನು ಒತ್ತುವರಿದಾರರ ವಿರುದ್ಧ ಬಳ್ಳಾರಿ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, ಸೋಮವಾರ ಬೆಳ್ಳಂಬೆಳಗ್ಗೆ ಜೆಸಿಬಿ ಯಂತ್ರಗಳೊಂದಿಗೆ ಕಾರ್ಯಾಚರಣೆ ನಡೆಸಿ ಸುಮಾರು 4 ಎಕರೆ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದಿದೆ. ನಗರದ ಗೌತಮ್ ನಗರ ಬಡಾವಣೆಯ ಸರ್ವೆ ನಂಬರ್ 607/* 1ಎ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಸರ್ವೆ ನಂಬರ್ 607/* 1ಎ ವ್ಯಾಪ್ತಿಯಲ್ಲಿ ಸುಮಾರು 1 ಎಕರೆ 23 ಸೆಂಟ್ಸ್ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು ದೊಡ್ಡದಾದ ಕಾಂಪೌಂಡ್ ನಿರ್ಮಿಸಲಾಗಿತ್ತು. ಅಲ್ಲದೆ, ಸಾರ್ವಜನಿಕ ರಸ್ತೆಯನ್ನು ಕೂಡ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಕಾನೂನು ಕ್ರಮ ಕೈಗೊಂಡು ಒತ್ತುವರಿ ಮಾಡಲಾಗಿದ್ದ ಕಾಂಪೌಂಡ್ ವಾಲ್ ಅನ್ನು ಜೆಸಿಬಿ ಬಳಸಿ ತೆರವುಗೊಳಿಸಿದೆ.
ಇದೇ ಸರ್ವೆ ನಂಬರ್ ನಲ್ಲಿ ಸುಮಾರು 14 ವರ್ಷಗಳ ಹಿಂದೆ ಹಿಂದುಳಿದ ಹಾಗೂ ಬುದ್ಧಿಮಾಂದ್ಯ ಮಕ್ಕಳ ಕಲ್ಯಾಣಕ್ಕಾಗಿ ‘ಆರೋಗ್ಯ ನಿಕೇತನ ಟ್ರಸ್ಟ್’ಗೆ 2 ಎಕರೆ 77 ಸೆಂಟ್ಸ್ ಜಮೀನು ಮಂಜೂರು ಮಾಡಲಾಗಿತ್ತು. ಸರ್ಕಾರದ ನಿಯಮಗಳ ಪ್ರಕಾರ ಮಂಜೂರಾದ ಜಮೀನನ್ನು 2 ವರ್ಷಗಳೊಳಗೆ ಉದ್ದೇಶಿತ ಸಮಾಜಮುಖಿ ಕಾರ್ಯಕ್ಕೆ ಬಳಸಬೇಕಿತ್ತು. ಆದರೆ, ನಿಗದಿತ ಅವಧಿಯಲ್ಲಿ ಜಮೀನು ಬಳಕೆಯಾಗದ ಕಾರಣ, ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಜಮೀನಿನ ಮಂಜೂರಾತಿಯನ್ನು ರದ್ದುಪಡಿಸಿ ಸರ್ಕಾರಕ್ಕೆ ಹಿಂಪಡೆಯಲಾಗಿದೆ.
ಒಟ್ಟಾರೆಯಾಗಿ ಒಂದೇ ಸರ್ವೆ ನಂಬರ್ ನಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸುಮಾರು 4 ಎಕರೆ ಜಮೀನನ್ನು ಜಿಲ್ಲಾಡಳಿತ ತೆರವುಗೊಳಿಸಿದ್ದು, 17ನೇ ಕಾರ್ಯಾಚರಣೆ ಇದಾಗಿದೆ.
ಟಾಸ್ಕ್ ಫೋರ್ಸ್ ನಿಂದ ಇದುವರೆಗೆ 150 ಎಕರೆ ಜಮೀನು ವಶ:
ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ ಆಸ್ತಿಗಳ ರಕ್ಷಣೆ ಹಾಗೂ ಒತ್ತುವರಿ ತೆರವಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಲು ಟಾಸ್ಕ್ ಫೋರ್ಸ್ ರಚನೆಯಾದ ಬಳಿಕ, ಇದುವರೆಗೆ ಬರೋಬ್ಬರಿ 150 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಒತ್ತುವರಿದಾರರಿಂದ ಮುಕ್ತಗೊಳಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ತಿಳಿಸಿದ್ದಾರೆ.
ಟಾಸ್ಕ್ ಫೋರ್ಸ್ ನಲ್ಲಿ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಬಳ್ಳಾರಿ ತಾಲೂಕು ತಹಶೀಲ್ದಾರ ನರಸಪ್ಪ ಸೇರಿದಂತೆ ಕಂದಾಯ ಅಧಿಕಾರಿಗಳು, ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಇತರರು ಹಾಜರಿದ್ದರು.
ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಸ್ಥಾನಗಳಿಗೆ ನವೆಂಬರ್ 13 ರಂದು ಚುನಾವಣೆ
ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್, ಉಪ ಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿ ಸ್ಥಾನಗಳಿಗೆ ನವೆಂಬರ್ 13 ರಂದು ಮಧ್ಯಾಹ್ನ 12.30 ಗಂಟೆಗೆ ಬಳ್ಳಾರಿ ಮಹಾನಗರ ಪಾಲಿಕೆಯ ಶ್ರೀ ಕೃಷ್ಣದೇವರಾಯ ಸಭಾಂಗಣದಲ್ಲಿ ಚುನಾವಣೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.
ಅಧ್ಯಕ್ಷಾಧಿಕಾರಿಗಳು ಹಾಗೂ ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಈ ಚುನಾವಣೆ ನಡೆಯಲಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್. ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯೋಗಸ್ಥ ಮಹಿಳೆಯರ ಮಕ್ಕಳಿಗಾಗಿ ಶಿಶುಪಾಲನಾ ಕೇಂದ್ರ ಆರಂಭಕ್ಕೆ ಅನುಮೋದನೆ: ಅರ್ಜಿ ಆಹ್ವಾನ
ಬಳ್ಳಾರಿ: ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲವಾಗುವಂತೆ 6 ತಿಂಗಳಿಂದ 6 ವರ್ಷದ ಒಳಗಿನ ಮಕ್ಕಳ ಆರೈಕೆಗಾಗಿ ಬಳ್ಳಾರಿಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಶಿಶುಪಾಲನಾ ಕೇಂದ್ರವನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ.
ಈ ಕೇಂದ್ರದ ನಿರ್ವಹಣೆಯನ್ನು ಮಾಡಲು ಮೊದಲ ಆದ್ಯತೆಯಾಗಿ ಜಿಲ್ಲಾ ಅಥವಾ ತಾಲೂಕು ಸ್ತ್ರೀಶಕ್ತಿ ಒಕ್ಕೂಟಗಳಿಗೆ ಅವಕಾಶ ನೀಡಲಾಗುತ್ತದೆ. ಒಂದು ವೇಳೆ ಸ್ತ್ರೀ ಶಕ್ತಿ ಒಕ್ಕೂಟಗಳು ನಿರಾಕರಿಸಿದಲ್ಲಿ, ಸರ್ಕಾರದಿಂದ ದೃಢೀಕರಿಸಲ್ಪಟ್ಟ ಮಕ್ಕಳ ಆರೈಕೆಗೆ ಸಂಬAಧಪಟ್ಟ ವಿದ್ಯಾರ್ಹತೆ ಹೊಂದಿರುವ ಮಹಿಳಾ ಸಿಬ್ಬಂದಿಗಳನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆ ಅಥವಾ ಸ್ವಸಹಾಯ ಸಂಘಗಳನ್ನು ನೇಮಿಸಲಾಗುತ್ತದೆ.
ಅರ್ಜಿಗಳನ್ನು ಕಚೇರಿ ವೇಳೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಅರ್ಜಿಗಳನ್ನು ಪಡೆದುಕೊಂಡು, ಜಿಲ್ಲಾ/ತಾಲೂಕು ಸ್ತಿçÃಶಕ್ತಿ ಒಕ್ಕೂಟಗಳು ಅಥವಾ ಸ್ವಯಂ ಸೇವಾ ಸಂಸ್ಥೆಯವರು ಅಗತ್ಯ ದಾಖಲಾತಿಗಳನ್ನು ದೃಢೀಕರಿಸಿ ಅರ್ಜಿಯೊಂದಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ನವೆಂಬರ್ 26 ರಂದು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದೇವಿಗರ, ಎಸ್.ಪಿ. ಸರ್ಕಲ್, ಸ್ತ್ರೀ ಸೇವಾನಿಕೇತನ ಆವರಣ, ಬಳ್ಳಾರಿ – 583103 ಅಥವಾ ಮೊಬೈಲ್ ಸಂಖ್ಯೆ: 9980920111 ಗೆ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

