ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗೆ ಪಿವಿಸಿ ಪೈಪ್ ನಿಂದ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಬೆಂಗಳೂರುನ ಸುಂಕದಕಟ್ಟೆಯ ಹೊಯ್ಸಳ ನಗರದ ಸೇಂಟ್ ಮೇರಿಸ್ ಪಬ್ಲಿಕ್ ಶಾಲೆಯಲ್ಲಿ ಎರಡು ದಿನ ಶಾಲೆಗೆ ವಿದ್ಯಾರ್ಥಿ ಗೈರಾಗಿದ್ದಕ್ಕೆ ಶಿಕ್ಷಕರು ಪಿವಿಸಿ ಪೈಪ್ ನಿಂದ ಬಾಸುಂಡೆ ಬರುವಂತೆ ಹೊಡೆದಿದ್ದರು. ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಬಾಲಕ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಈ ಘಟನೆ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಅಲ್ಲದೇ ಶಾಲೆಗೆ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿದೆ. ಇಲಾಖೆ ನಿಯಮಾನುಸಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಏಳು ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಮಕ್ಕಳ ಹಕ್ಕುಗಳ ಆಯೋಗ ನಿರ್ದೇಶನ ನೀಡಿದೆ.