ಬೆಳಗಾವಿ: ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿ ಸುರ್ವಣಸೌಧದ ಬಳಿ ನಡೆದಿದೆ.
‘ನಮ್ಮೂರಿಗೆ ಬಸ್ ಬಿಡಿ’ ಎಂದು ಆಗ್ರಹಿಸಿ ಬೆಳಗಾವಿಯ ಕೊಂಡಸಕಪ್ಪ ಗ್ರಾಮದ ವಿದ್ಯಾರ್ಥಿಗಳು ಸುವರ್ಣ ವಿಧಾನಸೌಧದ ಮುಂದೆ ಬೆಂಗಳೂರು-ಪುಣೆ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿಯೇ ಧರಣಿ ಕುಳಿತ ವಿದ್ಯಾರ್ಥಿಗಳು ವಾಹನ ಸಂಚಾರಕ್ಕೆ ತಡೆಯೊಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಲವು ಬಾರಿ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಬಸ್ ಬಿಡುವಂತೆ ಮನವಿ ಮಾಡಿದರೂ ಸ್ಪಂದಿಸಿಲ್ಲ. ಬಸ್ ಗಳಿಲ್ಲದೇ ಶಾಲೆ-ಕಾಲೇಜುಗಳಿಗೆ ತೆರಳಲು ಸಮಸ್ಯೆಯಾಗುತ್ತಿದ್ದು, ಈ ಬಗ್ಗೆ ಸರ್ಕಾರ ಗಮನಹರಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳು ದಿಢೀರ್ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡು ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆಯಿತು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಹಿರೇಬಾಗೇವಾಡಿ ಪೊಲೀಸರು, ಬಸ್ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿ ವಿದ್ಯಾರ್ಥಿಗಳ ಮನವೊಲಿಕೆ ಮಾಡಿದರು. ಬಳಿಕ ವಿದ್ಯಾರ್ಥಿಗಳು ರಸ್ತೆ ತಡೆ, ಧರಣಿ ಹಿಂಪಡೆದರು.