ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅನ್ಯಧರ್ಮೀಯಳಾದ ತನ್ನ ಕಿರಿಯ ಸಹಪಾಠಿಯನ್ನು ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಆರೋಪದ ಮೇಲೆ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ವಿರುದ್ಧ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇರಳ ಮೂಲದ ಅಹಮದ್ ಯಾಸಿನ್ ವಿರುದ್ಧ ಆರೋಪ ಕೇಳಿ ಬಂದಿದ್ದು, ಈ ಕೃತ್ಯ ಬೆಳಕಿಗೆ ಬಂದ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಪ್ರಿಯಕರನ ವಂಚನೆಯಿಂದ ಬೇಸತ್ತ ಯುವತಿ ವಿಷಯ ಸೇವಿಸಿ ಆತ್ಮಹತ್ಯೆ ಯತ್ನಿಸಿದಾಗ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿರುವುದು ಬೆಳಕಿಗೆ ಬಂದಿದೆ.
ಸಂತ್ರಸ್ತೆ ಪ್ರಥಮ ವರ್ಷದಲ್ಲಿ ಓದುತ್ತಿದ್ದಾಳೆ. ಆರೋಪಿ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದು, ಕೇರಳ ರಾಜ್ಯದವರಾಗಿದ್ದರಿಂದ ಪರಸ್ಪರ ಪರಿಚಯವಾಗಿ ಪ್ರೀತಿಸಿದ್ದಾರೆ. ಬಳಿಕ ದೇವನಹಳ್ಳಿ ಇಬ್ಬರು ಲಿವಿಂಗ್ ಟುಗೆದರ್ ನಲ್ಲಿದ್ದರು.
ಆರೋಪಿ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಶೋಷಣೆ ಮಾಡಿದ್ದಾನೆ. ಎರಡು ಬಾರಿ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾನೆ. ನಂತರ ಧರ್ಮದ ಕಾರಣ ಮುಂದಿಟ್ಟು ಮದುವೆಗೆ ನಿರಾಕರಿಸಿದ್ದಾನೆ. ವಂಚನೆಗೊಳಗಾದ ಯುವತಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಸಕಾಲಕ್ಕೆ ಚಿಕಿತ್ಸೆ ದೊರೆತಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

