ಬೆಂಗಳೂರು: ಬೆಂಗಳೂರಿನ ಬನ್ನೇರುಘಟ್ಟ ವ್ಯಾಪ್ತಿಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ದ್ವಿತೀಯ ಪಿಯು ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣ ಸಂಬಂಧ ಎಪ್ಐಆರ್ ದಾಖಲಾಗಿದೆ.
ಬೆಂಗಳೂರಿನ ಬನ್ನೇರುಘಟ್ಟ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಮೇಲೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಹೊಸದಾಗಿ ಹಾಸ್ಟೆಲ್ ಗೆ ಸೇರಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿಗೆ ದ್ವಿತೀಯ ಪಿಯು ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿದ್ದಾರೆ. ರ್ಯಾಗಿಂಗ್ ಬಗ್ಗೆ ವಿದ್ಯಾರ್ಥಿನಿ ಹಾಸ್ಟೆಲ್ ವಾರ್ಡನ್ ಹಾಗೂ ಪ್ರಾಂಶುಪಾಲರಿಗೆ ದೂರು ನೀಡಿದ್ದಳು. ದೂರು ನೀಡಿದ್ದಕ್ಕೆ ವಿದ್ಯಾರ್ಥಿಗಳು ಆಕೆಯನ್ನು ನಾಲ್ಕು ದಿನಗಳ ಕಾಲ ಹಾಸ್ಟೆಲ್ ರೂಂ ನಲ್ಲಿ ಕೂಡಿಹಾಕಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಬಟ್ಟೆ ಬಿಚ್ಚಿಸಿ, ನೃತ್ಯ ಮಾಡಿಸಿ ಕಬ್ಬಿಣದ ಹ್ಯಾಂಗರ್ ನಿಂದ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿನಿ ತಂದೆ ಬನ್ನೇರುಘಟ್ಟ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಐವರು ವಿದ್ಯಾರ್ಥಿಗಳು, ಹಾಸ್ಟೆಲ್ ವಾರ್ಡನ್, ಪ್ರಾಂಶುಪಾಲರ ವಿರುದ್ಧ ಎಫ್ಐಆರ್ ದಾಖಲಾಗಿದೆ.