ಪಾಕಿಸ್ತಾನದ ವಾಯುವ್ಯ ಭಾಗದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಸ್ವಾತ್ ಕಣಿವೆಯ ಕಬಾಲ್ ಪ್ರದೇಶದಲ್ಲಿ ಉಗ್ರರ ವಿರುದ್ಧ ನಡೆದಿದ್ದ ಶಾಂತಿ ರ‍್ಯಾಲಿ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, 19 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಪೊಲೀಸ್ ಠಾಣೆ ಸಮೀಪ ನೂರಾರು ಜನರು ಶಾಂತಿ ಮತ್ತು ಭದ್ರತೆಯನ್ನು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವುದು ಕಾಣಿಸುತ್ತದೆ. ಪ್ರತಿಭಟನಾಕಾರರು ಉಗ್ರಗಾಮಿತ್ವದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದ ವೇಳೆ ಏಕಾಏಕಿ ಭಾರೀ ಸ್ಫೋಟ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಸ್ಥಳದಲ್ಲಿ ಆತಂಕ ಮತ್ತು ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಜನರು ಪ್ರಾಣ ಉಳಿಸಿಕೊಳ್ಳಲು ಎಲ್ಲೆಡೆ ಓಡುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಜಿಲ್ಲಾ ಪೊಲೀಸ್ ಮುಖ್ಯಸ್ಥ ಒಮರ್ ಖಾನ್ ಅವರ ಪ್ರಕಾರ, ಸ್ವಾತ್ ಪ್ರದೇಶದಲ್ಲಿ ಮತ್ತೆ ಹೆಚ್ಚುತ್ತಿರುವ ಉಗ್ರ ಚಟುವಟಿಕೆಗಳನ್ನು ತಡೆಗಟ್ಟಬೇಕು ಹಾಗೂ ಜನರಿಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಸ್ಥಳೀಯರು ಈ ಶಾಂತಿ ರ‍್ಯಾಲಿಯನ್ನು ಆಯೋಜಿಸಿದ್ದರು.
ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ
ಪ್ರತ್ಯಕ್ಷದರ್ಶಿಗಳ ಪ್ರಕಾರ, ಭಾಷಣಕಾರರು ಭದ್ರತೆ ಒದಗಿಸುವುದು ಮತ್ತು ಉಗ್ರಗಾಮಿತ್ವವನ್ನು ನಿರ್ಮೂಲನೆ ಮಾಡುವುದು ಸರ್ಕಾರದ ಜವಾಬ್ದಾರಿ ಎಂದು ಹೇಳುತ್ತಿದ್ದ ಕೆಲವೇ ಕ್ಷಣಗಳಲ್ಲಿ ಸ್ಫೋಟ ಸಂಭವಿಸಿದೆ. ಹಲವು ವರ್ಷಗಳಿಂದ ಉಗ್ರರ ಹಿಂಸಾಚಾರದಿಂದ ತತ್ತರಿಸಿರುವ ಸ್ವಾತ್ ಕಣಿವೆಯಲ್ಲಿ ಜನರು ಭಯವಿಲ್ಲದೆ ಬದುಕಲು ಬಯಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ನಾಗರಿಕರು ಮತ್ತು ಪೊಲೀಸರು ಬಲಿ
ಪ್ರಾಂತೀಯ ತುರ್ತು ಸೇವೆಯ ವಕ್ತಾರ ಬಿಲಾಲ್ ಫೈಝಿ ಅವರ ಮಾಹಿತಿ ಪ್ರಕಾರ, ಆತ್ಮಾಹುತಿ ದಾಳಿಕೋರನು ಶಾಂತಿ ರ‍್ಯಾಲಿಯಲ್ಲಿ ಸೇರಿದ್ದ ಪ್ರತಿಭಟನಾಕಾರರನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಿದ್ದಾನೆ. ಮೃತಪಟ್ಟವರಲ್ಲಿ ಸಾಮಾನ್ಯ ನಾಗರಿಕರು ಹಾಗೂ ಭದ್ರತೆಗಾಗಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಯೂ ಸೇರಿದ್ದಾರೆ.
ಪಾಕ್ ನಾಯಕರ ಖಂಡನೆ
ಪಾಕಿಸ್ತಾನದ ರಾಷ್ಟ್ರಪತಿ ಅಸಿಫ್ ಅಲಿ ಜರ್ದಾರಿ, ಪ್ರಧಾನಿ ಶೆಹಬಾಜ್ ಶರೀಫ್ ಹಾಗೂ ಗೃಹ ಸಚಿವ ಮೊಹ್ಸಿನ್ ನಖ್ವಿ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಟಿಟಿಪಿ ಮೇಲೆ ಅನುಮಾನ
ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಇನ್ನೂ ಹೊತ್ತುಕೊಂಡಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಹೆಚ್ಚುತ್ತಿರುವ ಉಗ್ರ ಚಟುವಟಿಕೆಗಳ ಹಿನ್ನೆಲೆ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (TTP) ಸಂಘಟನೆಯ ಕೈವಾಡ ಇರಬಹುದೆಂಬ ಅನುಮಾನ ವ್ಯಕ್ತವಾಗುತ್ತಿದೆ.

