ಬೆಂಗಳೂರು: ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ರಣಬಿಸಿಲು ಹೆಚ್ಚುತ್ತಿದ್ದು, ಬಿಸಿಲ ಝಳ ಏರುತ್ತಿರುವ ಹಿನ್ನೆಲೆಯಲ್ಲಿ ಕಚೇರಿಗಳು, ಅಂಗನವಾಡಿ ಕೇಂದ್ರಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ತಾಪಮಾನ ಹೆಚ್ಚುತ್ತಿರುವುದರಿಂದ ಎರಡು ತಿಂಗಳ ಕಾಲ ವಿಜಯಪುರ, ಬಾಗಲಕೋಟೆ, ಕಲಬುರಗಿ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯದಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಅಂಗನವಾಡಿ ಕೇಂದ್ರಗಳ ಸಮಯದಲ್ಲಿಯೂ ಬದಲಾವಣೆ ಮಾಡಲಾಗಿದೆ.
ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಕಾರಣ ಬೆಳಗಾವಿ ವಿಭಾಗದ ವಿಜಯಪುರ ಹಾಗೂ ಬಾಗಲಕೋಟೆ, ಬೆಂಗಳೂರು ವಿಭಾಗದ ಚಿತ್ರದುರ್ಗ ಜಿಲ್ಲೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಅವಧಿಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ನಿಗದಿಪಡಿಸಿ ಸಮಯ ಬದಲಾವಣೆ ಮಾಡಲಾಗಿದೆ.
ಅಂಗನವಾಡಿ ಕೇಂದ್ರಗಳಲ್ಲಿ ಐಸಿಡಿಎಸ್ ನ ಇತರ ಸೇವೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.