ನವದೆಹಲಿ: ಅರಾವಳಿ ಬೆಟ್ಟಗಳ ಏಕರೂಪ ವ್ಯಾಖ್ಯಾನ ಕುರಿತ ಪ್ರಕರಣ ಸಂಬಂಧ ನವೆಂಬರ್ 20ರಂದು ನೀಡಿದ್ದ ತನ್ನದೇ ಆದೇಶಕ್ಕೆ ಇಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಅರಾವಳಿ ಬೆಟ್ಟಗಳು ಹಾಗೂ ಪರ್ವತ ಶ್ರೇಟಿಗಳ ಏಕರೂಪ ವ್ಯಾಖ್ಯಾನವನ್ನು ಒಪ್ಪಿಕೊಂಡು ದೆಹಲಿ, ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್ ಗಳಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆ ನೀಡುವುದನ್ನು ನಿಷೇಧಿಸಿದ ಸುಪ್ರೀಂ ಕೋರ್ಟ್ ನ ಹಿಂದಿನ ತೀರ್ಪು ಪ್ರಕಟವಾಗುತ್ತಿದ್ದಂತೆ ಅನಿಯಂತ್ರಿತ ಗಣಿಗಾರಿಕೆ ಮತ್ತು ಪರಿಸರ ಹಾನಿಯ ಬಗ್ಗೆ ಕಳವಳ ವ್ಯಕ್ತವಾಗಿತ್ತು. ತೀರ್ಪಿನ ವಿರುದ್ಧ ಸಾಕಷ್ಟು ಪ್ರತಿಭಟನೆಗಳು ಪ್ರಾರಂಭವಾಗಿದ್ದವು.
ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನವೆಂಬರ್ 20ರಂದು ನೀಡಿದ್ದ ತೀರ್ಪಿಗೆ ತಡೆ ನೀಡಿದ್ದು, ಈ ವಿಷಯದಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೇ ದೆಹಲಿ, ಹರಿಯಾಣ, ರಾಜಸ್ಥಾನ ಹಾಗೂ ಗುಜರಾತ್ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಿದೆ.

