ಆಧಾರ್ ಕಾರ್ಡ್ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನಗಳನ್ನು ನೀಡಿದೆ. ಆಧಾರ್ ಕಾರ್ಡ್‌ಗಳನ್ನು ಪೌರತ್ವ, ನಿವಾಸ ಹಾಗೂ ವಿಳಾಸದ ಪುರಾವೆಯಾಗಿ ಬಳಸುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್, ಈ ವಿಷಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ತಕ್ಷಣ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ವಿ. ಮೋಹನ್ ಅವರನ್ನೊಳಗೊಂಡ ಪೀಠವು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿತು. ಈ ಸಂಬಂಧ ಕೇಂದ್ರ ಸರ್ಕಾರ, ಎಲ್ಲಾ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಅರ್ಜಿದಾರರಾದ ಅಶ್ವಿನಿ ಕುಮಾರ್ ಉಪಾಧ್ಯಾಯ್ ಅವರು, ಆಧಾರ್ ಕಾರ್ಡ್ ಅನ್ನು ಕೇವಲ ಗುರುತಿನ ಚೀಟಿ (Identity Proof) ಆಗಿ ಮಾತ್ರ ಬಳಸಬೇಕು. ಪೌರತ್ವ, ನಿವಾಸ, ವಿಳಾಸ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಬಳಸುವುದನ್ನು ನಿಲ್ಲಿಸುವಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಮತದಾರರ ನೋಂದಣಿಗೆ ಜನ್ಮ ದಿನಾಂಕ ಮತ್ತು ನಿವಾಸದ ಪುರಾವೆಯಾಗಿ ಆಧಾರ್ ಕಾರ್ಡ್ ಬಳಸಲಾಗುತ್ತಿದೆ. ಇದು ಆಧಾರ್ ಕಾಯ್ದೆಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ. 2016ರ ಆಧಾರ್ ಕಾಯ್ದೆಯ ಸೆಕ್ಷನ್ 9ರ ಪ್ರಕಾರ, ಆಧಾರ್ ಪೌರತ್ವ ಅಥವಾ ನಿವಾಸದ ಪುರಾವೆಯಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಆದರೂ ಶಾಲಾ ಪ್ರವೇಶ, ಆಸ್ತಿ ಖರೀದಿ, ಜನನ ಪ್ರಮಾಣಪತ್ರ, ರೇಷನ್ ಕಾರ್ಡ್, ಚಾಲನಾ ಪರವಾನಗಿ ಸೇರಿದಂತೆ ಹಲವು ಸೇವೆಗಳಿಗೆ ವಯಸ್ಸು, ಪೌರತ್ವ ಮತ್ತು ನಿವಾಸದ ಪುರಾವೆಯಾಗಿ ಆಧಾರ್ ಬಳಸಲಾಗುತ್ತಿದೆ. ಹೊಸ ಮತದಾರರ ನೋಂದಣಿಗೂ ಆಧಾರ್ ಅನ್ನು ಜನ್ಮ ದಿನಾಂಕ ಹಾಗೂ ನಿವಾಸದ ದೃಢೀಕರಣ ದಾಖಲೆ ಎಂದು ಪರಿಗಣಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಇದರ ಪರಿಣಾಮವಾಗಿ ಅಕ್ರಮ ವಲಸಿಗರು ಮತ್ತು ಒಳನುಸುಳುವವರು ಆಧಾರ್ ಬಳಸಿ ವಿವಿಧ ದಾಖಲೆಗಳನ್ನು ಪಡೆಯುವ ಸಾಧ್ಯತೆ ಇದೆ ಎಂದು ಅರ್ಜಿದಾರರು ಕೋರ್ಟ್ ಗಮನಕ್ಕೆ ತಂದಿದ್ದಾರೆ.ಇದಲ್ಲದೆ, ಚುನಾವಣಾ ಪ್ರಕ್ರಿಯೆಯಲ್ಲಿನ ಪರಿಶೀಲನಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸಬೇಕು. ಈ ಸುಧಾರಣೆಗಳನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ, ಸೈಬರ್ ಭದ್ರತಾ ತಜ್ಞರು ಹಾಗೂ ಫೊರೆನ್ಸಿಕ್ ತಜ್ಞರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

