ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರ ವಿಧಾನ ಪರಿಷತ್ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈ ಹಿಂದೆ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಎಂ.ಕೆ. ಪ್ರಾಣೇಶ್ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಆದರೆ, ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಾಣೇಶ್ ಅವರ ಅರ್ಜಿಯನ್ನು ವಜಾಗೊಳಿಸಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಎತ್ತಿಹಿಡಿದಿದೆ. ಇದರೊಂದಿಗೆ ಪ್ರಾಣೇಶ್ ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದುಗೊಂಡಿದೆ.
ಈ ತೀರ್ಪಿನ ಪರಿಣಾಮವಾಗಿ, ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರಿಗೆ ಮೇಲುಗೈ ದೊರೆತಿದ್ದು, ಅವರ ಆಯ್ಕೆಗೆ ದಾರಿ ಸುಗಮವಾಗಿದೆ.ಸುಪ್ರೀಂ ಕೋರ್ಟ್‌ನ ಈ ತೀರ್ಪು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಮತದಾನದ ಹಕ್ಕು ಮತ್ತು ವಿಧಾನ ಪರಿಷತ್ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಹತ್ವದ ಕಾನೂನು ಸ್ಪಷ್ಟತೆಯನ್ನು ನೀಡಿರುವ ತೀರ್ಪು ಎಂದು ಪರಿಗಣಿಸಲಾಗುತ್ತಿದೆ.

