ಬೆಂಗಳೂರು : ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಮೊಮ್ಮಗ ಮತ್ತು ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ (55) ನಿಧನರಾಗಿದ್ದಾರೆ.ಸೂರಜ್ ಹೆಗ್ಡೆ ಅವರು ಭಾನುವಾರ (ಜೂನ್ 7) ರಾತ್ರಿ ಹೃದಯಸ್ತಂಭನದಿಂದ ನಿಧನರಾದರು.
ಸೂರಜ್ ಹೆಗ್ಡೆ ನಿಧನಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಸೂರಜ್ ಹೆಗ್ಡೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸೂರಜ್ ಹೆಗ್ಡೆ ಅವರು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ತಮಿಳುನಾಡು ಮತ್ತು ಪುದುಚೇರಿಯ ಎಐಸಿಸಿ ಕಾರ್ಯದರ್ಶಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು.ತಮ್ಮ ತಾತ ದೇವರಾಜ ಅರಸು ಅವರ ಹಾದಿಯಲ್ಲೇ ಸಾಗುತ್ತಾ, ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ಅವರು ಶ್ರಮಿಸುತ್ತಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು.ಅವರ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಡಿಕೆ ಶಿವಕುಮಾರ್ ಟ್ವೀಟ್
ಎಐಸಿಸಿ ಕಾರ್ಯದರ್ಶಿಗಳು, ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ರಾಜ್ಯ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾಗಿದ್ದ ನನ್ನ ಆತ್ಮೀಯ ಸಹೋದ್ಯೋಗಿ ಶ್ರೀ ಸೂರಜ್ ಹೆಗ್ಗಡೆ ಅವರ ಹಠಾತ್ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಸಂಘಟನಾ ಚಾತುರ್ಯ ಹಾಗೂ ಜನಪರ ಕಾಳಜಿಯ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಅವರು ನೀಡಿದ ಕೊಡುಗೆ ಅನನ್ಯವಾದದ್ದು. ಕಾರ್ಯಕರ್ತರೊಂದಿಗೆ ಸದಾ ಉತ್ತಮ ಬಾಂಧವ್ಯ ಹೊಂದಿದ್ದ ಒಬ್ಬ ಸಕ್ರಿಯ ನಾಯಕನನ್ನು ಇಂದು ನಾವು ಕಳೆದುಕೊಂಡಿದ್ದೇವೆ. ಈ ಕಷ್ಟದ ಸಮಯದಲ್ಲಿ ಭಗವಂತನು ಅವರ ಕುಟುಂಬದ ಸದಸ್ಯರಿಗೆ ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ವೇದನೆಯನ್ನು ಸಹಿಸುವ ಧೈರ್ಯವನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

