ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದು, ಕಾಂಗ್ರೆಸ್ ಶಾಸಕರ ಸಭೆ ನಡೆಸುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ ಕೈಗೊಂಡಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ವಿಚಾರವಾಗಿ, ಅವರು ರಾಹುಲ್ ಗಾಂಧಿ ಭೇಟಿಗೆ ಹೋಗಿಲ್ಲ, ರಾಹುಲ್ ಗಾಂಧಿ ಭೇಟಿಯಾಗಿ ಚರ್ಚಿಸುತ್ತಾರೆ ಎಂಬುದು ಕೇವಲ ಊಹಾಪೋಹ ಎಂದ್ದಾರೆ.
ಸಿಎಂ, ಡಿಸಿಎಂ ಕೇಂದ್ರ ಸಚಿವರನ್ನು ಭೇಟಿಯಾಗಲೆಂದು ದೆಹಲಿಗೆ ತೆರಳಿದ್ದಾರೆ. ಕಳಸಾ ಬಂಡೂರಿ ನಾಲಾ ಯೋಜನೆ, ಮೇಕೆದಾಟು ಯೋಜನೆ ವಿಚಾರವಾಗಿ ಕೇಂದ್ರ ಸಚಿವರ ಜೊತೆ ಚರ್ಚಿಸಲಿದ್ದಾರೆ. ರಾಜ್ಯಕ್ಕೆ ಜಿಎಸ್ ಟಿ ಅನುದಾನದಲ್ಲಿಯೇ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ. ಈ ನಿಟ್ಟಿನಲ್ಲಿಯೂ ಮನವಿ ಸಲ್ಲಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.