ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಫೈನಲ್ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆರಿಸಿಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಅದರಂತೆ ಬ್ಯಾಟಿಂಗ್ ಆರಂಭಿಸಿದ ಭಾರತದ ಪರ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿದಿದ್ದು, ಇಬ್ಬರ ಅಬ್ಬರಕ್ಕೆ ಪವರ್‌ಪ್ಲೇನಲ್ಲಿ ವೇಗದ ಅರ್ಧಶತಕದ ದಾಖಲೆ ನಿರ್ಮಾಣವಾಗಿದೆ.
ಇನ್ನು ಅಭಿಷೇಕ್ ಶರ್ಮಾ 21 ಎಸೆತಗಳಲ್ಲಿ 52 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದು, ಮಹತ್ವದ ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡಿ ಟೀಕೆಗಳಿಗೆಲ್ಲ ಉತ್ತರ ಕೊಟ್ಟಿದ್ದಾರೆ. ಆರಂಭದಲ್ಲಿ ಕೆಲ ಎಸೆತಗಳನ್ನು ಸರಿಯಾಗಿ ಪರಿಶೀಲಿಸಿಕೊಂಡ ಅಭಿಷೇಕ್ ಶರ್ಮಾ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಈ ಬಾರಿಯ ಟೂರ್ನಿಯಲ್ಲಿ ವೇಗದ ಅರ್ಧಶತಕ ಬಾರಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.
ಹೌದು, ಜೇಕಬ್ ಬೆಥೆಲ್ ಹಾಗೂ ಫಿನ್ ಅಲೆನ್ 19 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಈ ಬಾರಿಯ ಟೂರ್ನಿಯಲ್ಲಿ ವೇಗವಾಗಿ ಅರ್ಧಶತಕ ಬಾರಿಸಿದ ದಾಖಲೆ ಬರೆದಿದ್ದರು. ಅಲ್ಲದೇ ಇದು ಸೆಮಿಫೈನಲ್ ಪಂದ್ಯಗಳಲ್ಲಿ ಬಂದ ಕಾರಣ ಟಿ20 ವಿಶ್ವಕಪ್ ಇತಿಹಾಸದಲ್ಲಿ ನಾಕ್‌ಔಟ್ ಪಂದ್ಯಗಳಲ್ಲಿ ದಾಖಲಾದ ವೇಗದ ಅರ್ಧಶತಕ ಎಂಬ ದಾಖಲೆಯೂ ಸಹ ಆಗಿತ್ತು.
ಇದೀಗ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅಭಿಷೇಕ್ ಶರ್ಮಾ ಟಿ ಟ್ವೆಂಟಿ ವಿಶ್ವಕಪ್ ನಾಕ್‌ಔಟ್ ಪಂದ್ಯಗಳಲ್ಲಿ ವೇಗದ ಅರ್ಧಶತಕ ಹಾಗೂ ಈ ಬಾರಿಯ ಟೂರ್ನಿಯಲ್ಲಿ ವೇಗದ ಅರ್ಧಶತಕ ಬಾರಿಸಿದ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

