ಇಂದು ( ಫೆಬ್ರವರಿ 15 ) ಕೊಲಂಬೊದ ಆರ್ ಪ್ರೇಮದಾಸ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಗ್ರೂಪ್ ಹಂತದ 27ನೇ ಪಂದ್ಯ ನಡೆಯುತ್ತಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆರಿಸಿಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಕಲೆಹಾಕಿ ಪಾಕಿಸ್ತಾನಕ್ಕೆ 176 ರನ್‌ಗಳ ಗುರಿಯನ್ನು ನೀಡಿದೆ.
ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಮೊದಲ ಓವರ್‌ನ ಕೊನೆಯ ಎಸೆತದಲ್ಲೇ ಕ್ಯಾಚ್ ನೀಡಿ ಡಕ್‌ಔಟ್ ಆಗು ಮೂಲಕ ಭಾರತ ಕೇವಲ 1 ರನ್‌ಗೆ 1 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಬಳಿಕ ಮತ್ತೋರ್ವ ಆರಂಭಿಕ ಆಟಗಾರ ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ತಿಲಕ್ ವರ್ಮಾ ಜತೆ ಸೇರಿ 87 ರನ್‌ಗಳ ಜತೆಯಾಟವನ್ನಾಡಿದರು. ಆರಂಭದಿಂದಲೂ ಅಬ್ಬರಿಸಿದ ಇಶಾನ್ ಕಿಶನ್ 40 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 77 ರನ್ ಬಾರಿಸಿದರೆ, ತಿಲಕ್ ವರ್ಮಾ 25 ರನ್ ಗಳಿಸಿದರು. ಇನ್ನುಳಿದಂತೆ ನಾಯಕ ಸೂರ್ಯಕುಮಾರ್ ಯಾದವ್ 32, ಹಾರ್ದಿಕ್ ಪಾಂಡ್ಯ ಡಕ್‌ಔಟ್, ಶಿವಮ್ ದುಬೆ 27, ಅಕ್ಸರ್ ಪಟೇಲ್ ಡಕ್‌ಔಟ್ ಹಾಗೂ ಕೊನೆಯ ಓವರ್‌ನಲ್ಲಿ ಅಬ್ಬರಿಸಿದ ರಿಂಕು ಸಿಂಗ್ 4 ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ ಒಂದು ಬೌಂಡರಿ ಸಹಿತ ಅಜೇಯ 11 ರನ್ ಬಾರಿಸಿದರು.
ಪಾಕಿಸ್ತಾನದ ಪರ ಸೈಮ್ ಆಯೂಬ್ ಮೂರು ವಿಕೆಟ್, ಸಲ್ಮಾನ್ ಅಲಿ ಆಘಾ, ಶಾಹೀನ್ ಅಫ್ರಿದಿ ಹಾಗೂ ಉಸ್ಮಾನ್ ತಾರಿಕ್ ತಲಾ ಒಂದೊಂದು ವಿಕೆಟ್ ಪಡೆದರು.
ಭಾರತದ ಆಡುವ ಬಳಗ: ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್‌ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಮ್ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ಪಾಕಿಸ್ತಾನ ಆಡುವ ಬಳಗ: ಸೈಮ್ ಅಯೂಬ್, ಸಾಹಿಬ್ಜಾದಾ ಫರ್ಹಾನ್, ಸಲ್ಮಾನ್ ಅಘಾ (ನಾಯಕ), ಬಾಬರ್ ಅಜಮ್, ಮೊಹಮ್ಮದ್ ನವಾಜ್, ಶದಾಬ್ ಖಾನ್, ಫಹೀಮ್ ಅಶ್ರಫ್, ಉಸ್ಮಾನ್ ಖಾನ್ (ವಿಕೆಟ್‌ಕೀಪರ್), ಶಹೀನ್ ಅಫ್ರಿದಿ, ಅಬ್ರಾರ್ ಅಹ್ಮದ್, ಉಸ್ಮಾನ್ ತಾರಿಕ್.

