ಪ್ರಸ್ತುತ ನಡೆಯುತ್ತಿರುವ ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಫೀಲ್ಡಿಂಗ್ ಆರಿಸಿಕೊಂಡು ವೆಸ್ಟ್ ಇಂಡೀಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿದರು.
ಅದರಂತೆ ವೆಸ್ಟ್ ಇಂಡೀಸ್ ಬ್ಯಾಟಿಂಗ್ ವಿಭಾಗದ ಉತ್ತಮ ಆಟದಿಂದಾಗಿ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 195 ರನ್ ಕಲೆಹಾಕಿ ಭಾರತಕ್ಕೆ 196 ರನ್‌ಗಳ ಸವಾಲಿನ ಗುರಿಯನ್ನು ನೀಡಿದೆ. ಸದ್ಯ ಭಾರತಕ್ಕೆ ಅಗ್ನಿಪರೀಕ್ಷೆ ಶುರುವಾಗಿದ್ದು, ಈ ಮೊತ್ತವನ್ನು ಚೇಸ್ ಮಾಡಿದರೆ ಸೆಮಿಫೈನಲ್ ತಲುಪಲಿದ್ದು, ಸೋತರೆ ಟೂರ್ನಿಯಿಂದ ಹೊರಬೀಳಲಿದೆ.
ಇದಕ್ಕೂ ಮುನ್ನ ನಡೆದ ಪಂದ್ಯದಲ್ಲಿ ಜಿಂಬಾಬ್ವೆ ತಂಡದ ವಿರುದ್ಧ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಮೊದಲ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿರುವ ಕಾರಣ ಎರಡನೇ ಗುಂಪಿನಲ್ಲಿ ದ್ವಿತೀಯ ಸ್ಥಾನದಲ್ಲಿರುವ ನ್ಯೂಜಿಲೆಂಡ್ ವಿರುದ್ಧ ಬುಧವಾರ ( ಮಾರ್ಚ್ 4 ) ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೆಣಸಾಡಲಿದೆ.
ಎರಡನೇ ಗುಂಪಿನಲ್ಲಿ ಅಗ್ರಸ್ಥಾನದಲ್ಲಿರುವ ಇಂಗ್ಲೆಂಡ್ ವಿರುದ್ಧ ಮೊದಲ ಗುಂಪಿನಲ್ಲಿ ದ್ವಿತೀಯ ಸ್ಥಾನ ಪಡೆಯುವ ತಂಡ ಎರಡನೇ ಸೆಮಿಫೈನಲ್‌ನಲ್ಲಿ ಸೆಣಸಾಡಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲಲಿರುವ ತಂಡ ಇಂಗ್ಲೆಂಡ್ ವಿರುದ್ಧ ಗುರುವಾರ ( ಮಾರ್ಚ್ 5 ) ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ.

