ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಪಕ್ಷ ವಿರೋಧಿ ಕೆಲಸವಾಗುತ್ತದೆ. ಅಧಿಕಾರ ಹಂಚಿಕೆ ಬಗ್ಗೆ ಮಾತನಾಡುವುದು ಪಕ್ಷಕ್ಕೆ ಹಾನಿ ಮಾಡಿದಂತೆ. ನಾನು ಮತ್ತು ಸಿದ್ದರಾಮಯ್ಯ ಹೈಕಮಾಂಡ್ ನಾಯಕರ ಮಾತಿಗೆ ಬದ್ಧವಾಗಿ ನಡೆಯುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುವ ಭರವಸೆ ಇದೆ ಎಂದು ಸಿಎಂ ಹೇಳಿಕೆ, ಕುಣಿಗಲ್ ಶಾಸಕ ಡಾ. ರಂಗನಾಥ್ ಅವರ ಪ್ರತಿಕ್ರಿಯೆ, ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಿಸಿಎಂ, ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ನಮ್ಮ ಪಕ್ಷದ ಹೈಕಮಾಂಡ್ ಆದೇಶದಂತೆ ಎಲ್ಲರೂ ನಡೆಯಬೇಕು ಎಂಬ ಮಾತನ್ನು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ,
ಸಿದ್ದರಾಮಯ್ಯ ಅವರು ಹೇಳಿರುವ ಮಾತು ಅಂತಿಮ. ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಈ ವಿಚಾರವಾಗಿ ಯಾರೂ ಚರ್ಚೆ ಮಾಡುವಂತಿಲ್ಲ. ನನ್ನ ಪರವಾಗಿ ಆಗಲಿ, ಸಿದ್ದರಾಮಯ್ಯ ಪರವಾಗಿ ಆಗಲಿ ಮಾತನಾಡಿದರೆ ಪಕ್ಷಕ್ಕೆ ಹಾನಿ ಮಾಡಿದಂತೆ. ಈ ರೀತಿ ಹೇಳಿಕೆ ನೀಡಿದವರಿಗೆ ನೋಟಿಸ್ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಸೂಚನೆ ನೀಡಿದ್ದೇನೆ. ನಾವು ಪಕ್ಷ ಹೇಳಿದಂತೆ ನಡೆಯುವ ಶಿಸ್ತಿನ ಸಿಪಾಯಿಗಳು ಎಂದು ಡಿಸಿಎಂ ಡಿಕೆ ತಿಳಿಸಿದ್ದಾರೆ.