ಚೆನ್ನೈ: ತಮಿಳುನಾಡು ಬಿಜೆಪಿ ಘಟಕದಲ್ಲಿ ಭಾರಿಸಂಚಲನ ಸೃಷ್ಟಿಯಾಗಿದೆ. ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿ ತೊರೆದ ಬೆನ್ನಲ್ಲೇ ಮತ್ತಿಬ್ಬರು ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಕರು ನಾಗರಾಜನ್ ಹಾಗೂ ರಾಜ್ಯ ಕಾರ್ಯದರ್ಶಿ ಸುಮತಿ ವೆಂಕಟೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಸುಮತಿ ವೆಂಕಟೇಶ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಭಾರವಾದ ಹೃದಯದಿಂದ ನಾನು ಭಾರತೀಯ ಜನತಾ ಪಕ್ಷದ ತಮಿಳುನಾಡು ರಾಜ್ಯ ಕಾರ್ಯದರ್ಶಿ ಹುದ್ದೆಯಿಂದ ಕೆಳಗಿಳಿಯಲು ಮತ್ತು ಪಕ್ಷದೊಂದಿಗಿನ ನನ್ನ ಸಂಬಂಧವನ್ನ ಕೊನೆಗೊಳಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಬಿಜೆಪಿಯ ರಾಷ್ಟ್ರೀಯತೆ, ದೇಶಭಕ್ತಿ ಮತ್ತು ರಾಷ್ಟ್ರ ಸೇವೆಯ ಆದರ್ಶಗಳಿಂದ ನಾನು ಪ್ರೇರೇಪಣೆ ಪಡೆದಿದ್ದೇನೆ. ಈ ಮೌಲ್ಯಗಳು ನನ್ನ ರಾಜಕೀಯ ಪ್ರಯಾಣದುದ್ದಕ್ಕೂ ಮಾರ್ಗದರ್ಶನ ನೀಡಿವೆ. ಅದನ್ನ ಹಾಗೇ ಮುಂದುವರಿಸುತ್ತೇನೆ ಎಂದು ತಿಳಿಸಿದ್ದಾರೆ.
ಯೋಚಿಸಿಯೇ ಈ ನಿರ್ಧಾರ ಕೈಗೊಂಡಿದ್ದು, ಈ ಬಗ್ಗೆ ನನಗೆ ಯಾವುದೇ ಬೇಸರವಿಲ್ಲ. ನಾನು ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿದ್ದಾಗ ಮಾರ್ಗದರ್ಶನ, ಬೆಂಬಲ ಮತ್ತು ಪ್ರೋತ್ಸಾಹ ನೀಡಿದ ಎಲ್ಲಾ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ನಾಯಕರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರಿಗೆ ಕೃತಜ್ಙತೆ ಸಲ್ಲಿಸುತ್ತೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸಿ ಪಕ್ಷದ ಜವಾಬ್ದಾರಿಗಳಿಂದ ಮುಕ್ತಗೊಳಿಸಬೇಕು ಎಂದು ಪೋಸ್ಟ್‌ನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಬಿಜೆಪಿ ಮಾಜಿ ರಾಜ್ಯಧ್ಯಕ್ಷ ಅಣ್ಣಾಮಲೈ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ್ದ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರ, ಅಣ್ಣಾಮಲೈ ರಾಜೀನಾಮೆಯಿಂದ ಬಿಜೆಪಿಗೆ ಯಾವುದೇ ನಷ್ಟವಾಗುವುದಿಲ್ಲ. ವಿಶ್ವದ ಅತಿದೊಡ್ಡ ಪಕ್ಷವಾಗಿರುವ ಬಿಜೆಪಿಗೆ ಯಾವುದೇ ಹಿನ್ನಡೆಯಾಗುವುದಿಲ್ಲ. ಪಕ್ಷವು ತನ್ನ ಸಿದ್ಧಾಂತದಲ್ಲಿ ದೃಢವಾಗಿ ಉಳಿಯುತ್ತದೆ ಎಂದು ತಿಳಿಸಿದ್ದರು. ಅದರ ಬೆನ್ನಲ್ಲೇ ಇದೀಗ ಮತ್ತಿಬ್ಬರು ಪ್ರಮುಖರು ರಾಜೀನಾಮೆ ನೀಡಿರುವುದು ಕುತೂಹಲ ಮೂಡಿಸಿದೆ.

