ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಹೊಸ ಚರಿತ್ರೆ ಸೃಷ್ಟಿಸಿರುವ ನಟ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ 108 ಕ್ಷೇತ್ರಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಸರ್ಕಾರ ರಚನೆಗೆ ಮುಂದಾಗಿದೆ. ತಮಿಳುನಾಡಿನಲ್ಲಿ ಭರ್ಜರಿ ಗೆಲುವು ಸಾಧಿಸಿರುವ ನಟ ವಿಜಯ್ ಗೆಲುವಿನ ಬಳಿಕ ಮೊದಲ ಬಾರಿ ಪಕ್ಷದ ಸಭೆ ಕರೆದಿದ್ದಾರೆ.
ತಮಿಳುನಾಡಿನ ಪಣಿಯೂರಿನಲ್ಲಿರುವ ಟಿವಿಕೆ ಕಚೇರಿಯಲ್ಲಿ ವಿಜಯ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈಗಾಗಲೇ ವಿಜಯ್ ಪಣಿಯೂರು ಕಚೇರಿಗೆ ಆಗಮಿಸಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ನಡೆಸುತ್ತಿರುವ ಮೊದಲ ಸಭೆ ಇದಾಗಿದ್ದು, ಸಭೆಯಲ್ಲಿ ಟಿವಿಕೆ ಪಕ್ಷದಿಂದ ಗೆದ್ದಿರುವ ಎಲ್ಲಾ 107 ಶಾಸಕರು ಭಾಗಿಯಾಗಲಿದ್ದಾರೆ.
ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಲಿದ್ದು, ಬಹುತೇಕ ದಳಪತಿ ವಿಜಯ್ ಅವರೇ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗುವುದು ದಟ್ಟವಾಗಿದೆ. ಟಿವಿಕೆ ಪಕ್ಷಕ್ಕೆ ಇದು ಮೊದಲ ಗೆಲುವು ಹಾಗೂ ಮೊದಲ ಬಾರಿ ಸರ್ಕಾರ ರಚನೆಗೆ ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಹಲವಾರು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ.
ಟಿವಿಕೆ ಗೆಲುವಿನ ಬೆನ್ನಲ್ಲೇ ಈಗಾಗಲೇ ವಿಜಯ್ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ಎರಡು ವಾರಗಳ ಕಾಲವಾಕಾಶ ಕೋರಿದ್ದಾರೆ. ಒಟ್ಟಾರೆ ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಮುಂದಾಗಿರುವ ಟಿವಿಕೆ ಪಕ್ಷದ ಮುಖ್ಯಸ್ಥ ನಟ ವಿಜಯ್ ಆಡಳಿತಕ್ಕಾಗಿ ರಾಜ್ಯದ ಜನತೆ ಕುತೂಹಲದಿಂದ ಕಾಯುತ್ತಿದ್ದಾರೆ.
ತಿರುಚ್ಚಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ ನೀಡಲು ವಿಜಯ್ ನಿರ್ಧಾರ:
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಹೊಸ ದಾಖಲೆ ಬರೆದಿರುವ ನಟ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸರ್ಕಾರ ರಚನೆಗೆ ಮುಂದಾಗಿದೆ. ನಟ ದಳಪತಿ ವಿಜಯ್ ಈಗಾಗಲೇ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ನೂತನ ಪಕ್ಷ ಸ್ಥಾಪನೆಯೊಂದಿಗೆ ಮೊದಕ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಬರೋಬ್ಬರಿ 108 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಟಿವಿಕೆ ತಮಿಳುನಾಡಿನಲ್ಲಿ ಅತಿದೊಡ್ದ ಪಕ್ಷವಾಗಿ ಹೊರಹೊಮ್ಮಿದೆ. ನಟ ದಳಪತಿ ವಿಜಯ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿಯೂ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿ, ಒಂದು ಕ್ಷೇತ್ರವನ್ನು ಮಾತ್ರ ಉಳಿಸಿಕೊಳ್ಳಲು ತೀರ್ಮಾನಿಸಿದ್ದಾರೆ.
ತಿರುಚ್ಚಿ ಪೂರ್ವ ಹಾಗೂ ಪೆರಂಬೂರು ಈ ಎರಡೂ ಕ್ಷೇತ್ರಗಳಲ್ಲಿ ವಿಜಯ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನಿಯಮದ ಪ್ರಕಾರ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀದಲಿದ್ದಾರೆ. ತಿರುಚ್ಚಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಪೆರಂಬೂರು ಕ್ಷೇತ್ರದಿಂದ ಶಾಸಕರಾಗಿ ಮುಂದುವರೆಯಲು ನಿರ್ಧರಿಸಿದ್ದಾರೆ.
ವಿಜಯ್ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕು.ಪ.ಕೃಷ್ಣನ್ ಅವರಿಗೆ ಟಿವಿಕೆ ಟಿಕೆಟ್ ನೀಡಲು ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಶೀಘ್ರವೇ ಸಭೆ ನಡೆಸಿ ಟಿವಿಕೆ ತಿರುಚ್ಚಿ ಪೂರ್ವ ಕ್ಷೇತ್ರದಿಂದ ಕೃಷ್ಣನ್ ಅವರನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಲಿದೆ ಎಂದು ತಿಳಿದುಬಂದಿದೆ.

