ಬೆಂಗಳೂರು: ಚಿರತೆ ಹಾವಳಿ ತಪ್ಪಿಸಲು ಮತ್ತು ಕಾಡಾನೆ ಹಾವಳಿ ನಿಯಂತ್ರಿಸಲು ಚಿರತೆ ಕಾರ್ಯಪಡೆ ಮತ್ತು ಆನೆ ಕಾರ್ಯಪಡೆ ರಚಿಸಿ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅನುಮೋದನೆ ನೀಡಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಚಿರತೆ ಹಾವಳಿ ತಪ್ಪಿಸಲು ಚಿರತೆ ಕಾರ್ಯಪಡೆ ರಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ಆನೆ ಕಾರ್ಯಪಡೆ ರಚಿಸಲಾಗಿದೆ.
ತುಮಕೂರು ಜಿಲ್ಲೆಯ ತಿಪಟೂರು, ಕುಣಿಗಲ್, ಮಧುಗಿರಿ, ಪಾವಗಡ, ಕೊರಟಗೆರೆ ಪ್ರದೇಶದಲ್ಲಿ ಚಿರತೆ ಹಾವಳಿ ಇರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚಿಸಿ 59 ಸಿಬ್ಬಂದಿ ನಿಯೋಜಿಸಲಾಗಿದೆ. ನಾಲ್ಕು ತಂಡದಲ್ಲಿ ಕಾರ್ಯಪಡೆ ಕಾರ್ಯ ನಿರ್ವಹಿಸಲಿದೆ. ವಸತಿ ಪ್ರದೇಶ, ಜಮೀನುಗಳಲ್ಲಿ ಚಿರತೆ ಕಾಣಿಸಿಕೊಂಡಿದೆ ಸೆರೆಗೆ ತುರ್ತು ಕ್ರಮ ವಹಿಸಲಿದೆ ಎಂದು ಹೇಳಲಾಗಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಆನೆಗಳನ್ನು ಮರಳಿ ಕಾಡಿಗಟ್ಟಲು ಪ್ರತ್ಯೇಕ ಆನೆ ಕಾರ್ಯಪಡೆ ರಚಿಸಲು 48 ಸಿಬ್ಬಂದಿ ನಿಯೋಜಿಸಲಾಗಿದೆ. ಕಾಡಾನೆಗಳು ಓಡಾಡುವ ವಸತಿ ಪ್ರದೇಶ ತೋಟ, ಜಮೀನು ಬಳಿ ಗಸ್ತು ತಿರುಗಲಿದ್ದು, ಆನೆಗಳು ಕಂಡು ಬಂದಲ್ಲಿ ಕಾಡಿಗೆ ಮರಳಿಸುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಲಾಗುವುದು. ಆನೆಗಳ ಚಲನವಲನದ ಬಗ್ಗೆ ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡಿ ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ ರವಾನಿಸಲು ಅನುಕೂಲವಾಗಲಿದೆ ಎಂದು ಹೇಳಲಾಗಿದೆ.