BREAKING: ರೈತರ 3 ಎಕರೆ ಸಾಗುವಳಿ ಭೂಮಿ ಸಕ್ರಮ, ಯೋಜನಾ ಸಂತ್ರಸ್ತರ ಭೂ ಹಕ್ಕಿನ ಸಮಸ್ಯೆ ನಿವಾರಣೆಗೆ ಟಾಸ್ಕ್ ಫೋರ್ಸ್: ಮಧುಬಂಗಾರಪ್ಪ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಜಲವಿದ್ಯುತ್ ಯೋಜನೆಗಳು ಹಾಗೂ ನೀರಾವರಿ ಯೋಜನೆಗಳ ಸಂತ್ರಸ್ತರ ಪುನರ್ವಸತಿ, ಭೂಮಿ ಸಮಸ್ಯೆ ಹಾಗೂ ಇತರೆ ಭೂ ಹಕ್ಕಿನ ಸಮಸ್ಯೆಗಳ ಪರಿಹಾರಕ್ಕಾಗಿ ಹಿರಿಯ ಐ.ಎ.ಎಸ್. ಅಧಿಕಾರಿ ನೇತೃತ್ವದಲ್ಲಿ ಟಾಸ್ಕ್ಫೋರ್ಸ್ ರಚನೆಯಾಗಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದರು.

ಶರಾವತಿ ಯೋಜನೆ ಮುಳುಗಡೆ ಸಂತ್ರಸ್ತರು ಹಾಗೂ ಪಾರಂಪರಿಕ ಅರಣ್ಯವಾಸಿಗಳ ಬೇಡಿಕೆ ಹಾಗೂ ಸಮಸ್ಯೆಗಳ ಕುರಿತು ಬೆಂಗಳೂರಿನಲ್ಲಿ ಸಂತ್ರಸ್ಥರು ಹಾಗೂ ರೈತರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

1978 ಇಸವಿಗಿಂತ ಮೊದಲು ಸಾಗುವಳಿ ಮಾಡುತ್ತಿದ್ದ ರೈತರಿಗೆ 3 ಎಕರೆ ಭೂಮಿ ಸಕ್ರಮಗೊಳಿಸಬೇಕು. ಈ ವಿಷಯದಲ್ಲಿ ಕೈಬಿಟ್ಟಿರುವ ಪ್ರಕರಣಗಳನ್ನು ಪರಿಗಣಿಸಬೇಕು ಎಂದು ಹೇಳಿದರು.

ವಿವಿಧ ಭೂಮಿ ಮಂಜೂರಾತಿ ಕಾಯ್ದೆ ಹಾಗೂ ನಿಯಮಗಳ ಅಡಿಯಲ್ಲಿ ಅಧಿಸೂಚಿತ ಅರಣ್ಯ ಪ್ರದೇಶದಲ್ಲಿ ಮಂಜೂರು ಮಾಡಲಾದ ರೈತರ ಸಾಗುವಳಿ ಭೂಮಿಗಳನ್ನು ಅರಣ್ಯ ಭೂಮಿ ಎಂದು ಇಂಡೀಕರಣ ಮಾಡುತ್ತಿರುವುದರಿಂದ ಆಗಿರುವ ಸಮಸ್ಯೆಗಳ ಬಗ್ಗೆ ಸಚಿವರು ಅಧಿಕಾರಿಗಳಿಗೆ ಮನವರಿಕೆ ಮಾಡಿದರು.

ಅರಣ್ಯಭೂಮಿ ಒತ್ತುವರಿಗೆ ಸಂಬಂಧಿಸಿದಂತೆ ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ 2011ರ ವಿಶೇಷ ನ್ಯಾಯಾಲಯದಲ್ಲಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸುವ ಮೂಲಕ ರೈತರಿಗೆ ತೊಂದರೆಕೊಡಲಾಗುತ್ತಿದೆ ಎಂಬುದನ್ನು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದರು.

ಕರ್ನಾಟಕ ಅರಣ್ಯ ಕಾಯ್ದೆ-1963ರ ಸೆಕ್ಷನ್ 04ರ ಅಡಿಯಲ್ಲಿ ಮೀಸಲು ಅರಣ್ಯ ಪ್ರಾಥಮಿಕ ಅಧಿಸೂಚನೆಯಿಂದ ರೈತರ ಹಿಡುವಳಿ ಭೂಮಿ, ಬಗರ್ ಹುಕುಂ ಭೂಮಿ ಹಾಗೂ ಜನವಸತಿ ಪ್ರದೇಶಗಳನ್ನು ಕೈಬಿಟ್ಟು ಸೆಕ್ಷನ್ 17ರ ಅಡಿಯಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿ, ಭೂಮಿ ಹಾಗೂ ವಸತಿ ಹಕ್ಕನ್ನು ಮಂಜೂರು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸುಪ್ರೀಂಕೋರ್ಟ್ನಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿಗೆ ಸಂಬಂಧಿಸಿದಂತೆ ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಿದೆ. ಇದನ್ನು ತ್ವರತಿವಾಗಿ ಇತ್ಯರ್ಥ ಪಡಿಸಲು ಕ್ರಮವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ವಿವಿಧ ಇಲಾಖೆ ಉನ್ನತ ಅಧಿಕಾರಿಗಳು, ರೈತ ಮುಖಂಡರಾದ ಸಾಗರ ಜಯಂತ್, ತೀ.ನ. ಶ್ರೀನಿವಾಸ್, ಶ್ರೀಕರ್, ಬಿ.ಎ.  ರಮೇಶ್ ಹೆಗಡೆ, ದಿನೇಶ್ ಶಿರವಾಳ, ಧರ್ಮಪ್ಪ, ದುಗೂರು ಪರಮೇಶ್ ಮತ್ತಿತರರು ಉಪಸ್ಥಿತರಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read