ಭದ್ರಾ ಮೇಲ್ದಂಡೆ, ಮೇಕೆದಾಟು ಸೇರಿ ರಾಜ್ಯದ ಎಲ್ಲಾ ಯೋಜನೆಗಳಿಗೆ ಅನುಮತಿ ನೀಡಲು ಕೇಂದ್ರ ಸಚಿವರಿಗೆ ಸಿಎಂ ಮನವಿ

ನವದೆಹಲಿ: ಇಂದು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ ಅವರು ಕರ್ನಾಟಕದ ಪ್ರಮುಖ ನೀರಾವರಿ ಪ್ರಸ್ತಾವನೆಗಳಿಗೆ ಸಕಾಲಿಕ ಅನುಮೋದನೆ ಕೋರಿ ಮನವಿ ಸಲ್ಲಿಸಿದ್ದಾರೆ.

ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಮತ್ತು ರೈತರ ಕಲ್ಯಾಣವನ್ನು ಖಚಿತಪಡಿಸಿಕೊಳ್ಳಲು ಮೇಕೆದಾಟು ಮತ್ತು ಅಪ್ಪರ್ ಭದ್ರಾ ಯೋಜನೆಗಳ ಮಹತ್ವವನ್ನು ಒತ್ತಿ ಹೇಳಿದ್ದಾರೆ.

ಕೇಂದ್ರ ಜಲಶಕ್ತಿ ಸಚಿವರಿಗೆ ಸಲ್ಲಿಸಿರುವ ಬೇಡಿಕೆ ಪತ್ರದ ವಿವರ:

ದೇಶದಲ್ಲೇ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಗೂ ಅನುಷ್ಠಾನಗೊಳಿಸಲಾಗಿರುವ ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ. ಉತ್ಪಾದನೆಯಲ್ಲಿನ ಹೆಚ್ಚಳ, ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ನೀರಿನ ನಿರ್ವಹಣೆಯಲ್ಲಿ ಸುಧಾರಣೆ, ಹವಾಮಾನ ವೈಪರೀತ್ಯದ ನಿರ್ವಹಣೆ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ. ರಾಜ್ಯ ಸರ್ಕಾರ ಕೃಷಿ ಉತ್ಪಾದನೆ ಹೆಚ್ಚಳ, ರೈತರ ಆದಾಯ ಹೆಚ್ಚಳ  ಮಾಡಲು ಪೂರಕವಾಗಿ ನಿರಂತರ ಮತ್ತು ಸಮರ್ಪಕ ನೀರಾವರಿ ಪೂರೈಕೆಗೆ ಬದ್ಧವಾಗಿದೆ.

ಕರ್ನಾಟಕ ರಾಜ್ಯದ ನೀರಾವರಿ ಯೋಜನೆ/ವಿಷಯಗಳಿಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ನಾನು ತಮ್ಮ ಗಮನ ಸೆಳೆಯಬಯಸುತ್ತೇನೆ. ಕೇಂದ್ರ ಸರ್ಕಾರದ ಅನುಮತಿಗಾಗಿ ಬಾಕಿಯಿರುವ ಕರ್ನಾಟಕದ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತಾವು ವೈಯಕ್ತಿಕವಾಗಿ ಗಮನ ಹರಿಸಲು ಮನವಿ ಮಾಡುತ್ತೇನೆ.

ಕರ್ನಾಟಕ ರಾಜ್ಯದ ಬಾಕಿಯಿರುವ ಎಲ್ಲಾ ನೀರಾವರಿ ಯೋಜನೆಗಳಿಗೆ/ಪ್ರಸ್ತಾವನೆಗಳಿಗೆ ಅನುಮತಿ/ಕ್ಲಿಯರೆನ್ಸ್‌ ನೀಡಲು ಜಲಶಕ್ತಿ ಸಚಿವಾಲಯಕ್ಕೆ ತಾವು ನಿರ್ದೇಶನ ನೀಡಬೇಕು. ಈ ಯೋಜನೆಗಳು ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆ ಮೂಲಕ ರೈತರ ಕಲ್ಯಾಣಕ್ಕೆ ನೆರವಾಗಲಿದೆ.” ಎಂದು ಸಿಎಂ ಮನವಿ ಪತ್ರ ನೀಡಿದ್ದಾರೆ.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ವಿ. ಸೋಮಣ್ಣ ಮತ್ತು ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read