ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ಕರ್ತವ್ಯನಿರತ ಶಿಕ್ಷಕರೊಬ್ಬರು ಪಾಠ ಮಾಡುತ್ತಿರುವಾಗಲೇ ಅಸುನೀಗಿದ ಹೃದಯವಿದ್ರಾವಕ ಘಟನೆ ಸಂಭವಿಸಿದೆ.
ಮೃತ ಶಿಕ್ಷಕ ಸತೀಶ್ (53) ಇವರು ಕೇರಳಾಪುರ ಗ್ರಾಮದ ನಿವಾಸಿಯಾಗಿದ್ದು, ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.ಎಂದಿನಂತೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಸತೀಶ್ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಪಾಠ ಮಾಡುತ್ತಿರುವಾಗಲೇ ಅವರು ಏಕಾಏಕಿ ತರಗತಿ ಕೊಠಡಿಯಲ್ಲಿ ಕುಸಿದು ಬಿದ್ದಿದ್ದಾರೆ.ಇದನ್ನು ಕಂಡು ಗಾಬರಿಗೊಂಡ ವಿದ್ಯಾರ್ಥಿಗಳು ಮತ್ತು ಸಹ ಶಿಕ್ಷಕರು ತಕ್ಷಣ ನೆರವಿಗೆ ಧಾವಿಸಿ ಅಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು.
ಶಿಕ್ಷಕರ ಅಕಾಲಿಕ ನಿಧನದಿಂದಾಗಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಹೋದ್ಯೋಗಿಗಳು ಕಣ್ಣೀರಿಟ್ಟಿದ್ದು, ಇಡೀ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

