ಬೆಂಗಳೂರು: ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ನಾಲ್ಕನೇ ಬಾರಿ ಮುಂದೂಡಿಕೆಯಾಗಿದೆ. ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಶಿಕ್ಷಕರು ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಕಾರಣ ಏಕಕಾಲದಲ್ಲಿ ವರ್ಗಾವಣೆ ಕೌನ್ಸೆಲಿಂಗ್ ಹಾಗೂ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಸಮಸ್ಯೆಯಾಗಲಿದೆ.
ಈ ಹಿನ್ನೆಲೆಯಲ್ಲಿ ಗುರುವಾರದಿಂದ ಆರಂಭವಾಗಬೇಕಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಅನ್ನು ಶಿಕ್ಷಣ ಇಲಾಖೆ ಮುಂದೂಡಿದೆ. ಮುಂದಿನ ಎಲ್ಲಾ ರೀತಿಯ ಕೌನ್ಸೆಲಿಂಗ್ ದಿನಾಂಕಗಳನ್ನು ಪರಿಷ್ಕೃತ ವರ್ಗಾವಣೆ ವೇಳಾಪಟ್ಟಿಯಲ್ಲಿ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಪೂರ್ಣಗೊಂಡ ನಂತರ ಕೌನ್ಸೆಲಿಂಗ್ ನಡೆಸಲಾಗುವುದು. ಈ ಮೂಲಕ 2024 -25 ನೇ ಸಾಲಿನ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ನಾಲ್ಕನೇ ಬಾರಿಗೆ ಮುಂದೂಡಲಾಗಿದೆ. ಮೊದಲ ವೇಳಾಪಟ್ಟಿ ಪ್ರಕಾರ ಜೂನ್ ನಲ್ಲಿಯೇ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳಬೇಕಿತ್ತು. ಆದರೆ, ಹೆಚ್ಚುವರಿ ಶಿಕ್ಷಕರ ಹೊಂದಾಣಿಕೆ ಸಮಸ್ಯೆ ಕಾರಣ ಮೂರು ಬಾರಿ ಮುಂದೂಡಿಕೆಯಾಗಿತ್ತು.