ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪೂರ್ಣಗೊಳಿಸಲು ಅಕ್ಟೋಬರ್ 31ರವರೆಗೆ ಕಾಲಾವಕಾಶ ವಿಸ್ತರಿಸಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಅಕ್ಟೋಬರ್ 20 ರಿಂದ 22 ರವರೆಗೆ ದೀಪಾವಳಿ ರಜೆ ಹಿನ್ನೆಲೆಯಲ್ಲಿ ಸಮೀಕ್ಷೆ ಕಾರ್ಯಕ್ಕೆ ತಾತ್ಕಾಲಿಕ ವಿರಾಮ ನೀಡಲಾಗಿದೆ. ಅ. 23ರಿಂದ 31ರವರೆಗೆ ಸಮೀಕ್ಷೆ ನಡೆಯಲಿದೆ. ಬೆಂಗಳೂರು ನಗರ ಒಳಗೊಂಡಂತೆ ಬಾಕಿ ಇರುವ ಜಿಲ್ಲೆಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಲು ತಿಳಿಸಲಾಗಿದೆ.
ಬಾಕಿ ಇರುವ ಸಮೀಕ್ಷೆ ಪೂರ್ಣಗೊಳಿಸಲು ಎಲ್ಲಿಯೂ ಶಿಕ್ಷಕರನ್ನು ಬಳಕೆ ಮಾಡುವಂತಿಲ್ಲ. ಇತರೆ ಸರ್ಕಾರಿ ಸಿಬ್ಬಂದಿ ನಿಯೋಜಿಸಿ ಸಮೀಕ್ಷೆ ಕೈಗೊಳ್ಳಲಾಗುವುದು.
ಪೂರ್ಣ ಪ್ರಮಾಣದಲ್ಲಿ ಸಮೀಕ್ಷೆ ಯಶಸ್ವಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದಸರಾ ರಜೆ ಮುಗಿದು ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಕರನ್ನು ಬಳಕೆ ಮಾಡಿಕೊಳ್ಳದಿರಲು ತೀರ್ಮಾನಿಸಲಾಗಿದೆ ಎಂದು ಸಭೆಯ ಬಳಿಕ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.