ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಇಂದು ನಡೆಯಲಿದ್ದು ರಾಜ್ಯದ 903 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಒಟ್ಟು 3.35 ಲಕ್ಷ ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.
ಅಭ್ಯರ್ಥಿಗಳ ನೈಜತೆ ಪರಿಶೀಲಿಸಲು ಇದೇ ಮೊದಲ ಬಾರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಮತ್ತು ಫೇಸ್ ರೆಕಗ್ನಿಷನ್ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಪರಿಚಯಿಸಿದೆ.
ಇಂದು ಬೆಳಗ್ಗೆ ಪತ್ರಿಕೆ-1 ಮಧ್ಯಾಹ್ನ ಪತ್ರಿಕೆ -2 ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳನ್ನು ತಡೆಯಲು ಎಲ್ಲಾ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ನಡೆಸುವ ಮೆಟಲ್ ಡಿಟೆಕ್ಟರ್ ತಪಾಸಣೆ, ಡಿಜಿಟಲ್ ಬೆರಳಚ್ಚು ದಾಖಲಿಸುವಿಕೆ ಮತ್ತು ಮುಖ ಗುರುತಿಸುವಿಕೆ ಪ್ರಕ್ರಿಯೆಯಲ್ಲಿ ಭಾಗಿಯಾಗುವಂತೆ ಸೂಚಿಸಲಾಗಿದೆ.
ನಿಷೇಧಾಜ್ಞೆ ಜಾರಿ
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಡಿಸೆಂಬರ್ 7 ರಂದು ನಡೆಯಲಿದ್ದು, ಸುಗಮ ಮತ್ತು ಶಾಂತಿಯುತವಾಗಿ ಪರೀಕ್ಷೆ ನಡೆಯುವ ಉದ್ದೇಶದಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಡಿ. 7ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 4.30 ಗಂಟೆಯವರೆಗೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಾಜ್ಞೆ ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಜರಾಕ್ಸ್, ಟೈಪಿಂಗ್ ಸೆಂಟರ್‌ಗಳನ್ನು ನಿಷೇಧಿಸಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರವನ್ನು ಹೊಂದಿದ ಅಭ್ಯರ್ಥಿಗಳು, ನಿಯೋಜಿತ ಶಿಕ್ಷಕರು ಹಾಗೂ ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
