ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಯೋಜನೆ ಜಾರಿಗೆ ತಂದ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮನರೇಗಾ ಅಡಿಯಲ್ಲಿ ರಾಜ್ಯದಲ್ಲಿ ಪ್ರಸಕ್ತ ಸಾಲಿನ ಕಾಮಗಾರಿಗಳ ಕ್ರಿಯಾಯೋಜನೆ ರೂಪಿಸಿ ಜಾರಿಗೊಳಿಸಲು ಅನುಮತಿ ನೀಡಬೇಕು ಎಂದು ನ್ಯಾಯಾಲಯದ ಮೊರೆ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ.
ನರೇಗಾದಡಿಯಲ್ಲೇ ಕಾಮಗಾರಿಗಾಗಿ ಹೋರಾಟ ನಡೆಸಲಿದ್ದು, ಉದ್ಯೋಗ ಖಾತ್ರಿ ರದ್ದತಿ ವಿರುದ್ಧವೂ ಕಾನೂನು ಹೋರಾಟ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯಗಳ ಜೊತೆಗೆ ಚರ್ಚಿಸದೇ ಏಕಪಕ್ಷೀಯವಾಗಿ ನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಯೋಜನೆ ಜಾರಿ ಮಾಡಿರುವ ಕೇಂದ್ರದ ಧೋರಣೆ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಇದುವರೆಗೆ ವಿಬಿ ಜಿ ರಾಮ್ ಜಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ. ಪರ್ಯಾಯವಾಗಿ ಯಾವುದೇ ವ್ಯವಸ್ಥೆಯನ್ನು ಮಾಡಿಲ್ಲ. ಗ್ರಾಮೀಣ ಜನರ ಉದ್ಯೋಗ ಹಕ್ಕು ಕಸಿದುಕೊಂಡಂತಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ನರೇಗಾ ಯೋಜನೆ ಮುಂದುವರೆಸುವುದು ಅನಿವಾರ್ಯವಾಗಿದೆ. ಈ ಕುರಿತು ಕ್ರಿಯಾ ಯೋಜನೆ ಸಿದ್ಧಪಡಿಸಲು ರಾಜ್ಯ ಸರ್ಕಾರಕ್ಕೆ ಅವಕಾಶ ನೀಡುವಂತೆ ನ್ಯಾಯಾಲಯದ ಮೊರೆ ಹೋಗಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

