ಬೆಂಗಳೂರು: ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ ಮತ್ತು ರಾಜ್ಯ ಚುನಾವಣಾ ಆಯೋಗದ ನೇತೃತ್ವದಲ್ಲಿ ಪ್ರತ್ಯೇಕ ಮತದಾರರ ಪಟ್ಟಿ ಸಿದ್ಧಪಡಿಸಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದ್ದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರ ಮತ್ತು ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಆರೋಪ ಹೊರಿಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೋರಾಟ ನಡೆಸುತ್ತಿದ್ದಾರೆ. ತಮ್ಮ ಪಕ್ಷದ ನಾಯಕನ ಹೋರಾಟಕ್ಕೆ ಬೆಂಬಲ ಸೂಚಿಸುವ ರೀತಿಯಲ್ಲಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಕೇಂದ್ರಕ್ಕೆ ಸೆಡ್ಡು ಹೊಡೆದು ಹೊಸ ಹೆಜ್ಜೆ ಇಟ್ಟಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗೆ ಹೊಸ ಮತದಾರರ ಪಟ್ಟಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಅಧಿಕಾರ ನೀಡಲು ಸರ್ಕಾರ ತೀರ್ಮಾನಿಸಿದೆ.
ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಿ ಮತದಾನ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲಾಗುವುದು. ಮತದಾರರ ಪಟ್ಟಿ ಪರಿಷ್ಕರಿಸಿ ಹೊಸ ಪಟ್ಟಿ ತಯಾರಿಸಲು ಕಾಯ್ದೆಗೆ ಅಗತ್ಯ ತಿದ್ದುಪಡಿ ಮಾಡಲು ಹೊಸ ನಿಯಮಾವಳಿ ರೂಪಿಸಲಾಗುವುದು. ಇನ್ನು 15 ದಿನಗಳಲ್ಲಿ ನಿಯಮಗಳನ್ನು ಅಂತಿಮಗೊಳಿಸಿ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಕೇಂದ್ರ ಚುನಾವಣಾ ಆಯೋಗ ತಯಾರಿಸಿದ ಮತದಾರರ ಪಟ್ಟಿಯಲ್ಲಿ ವ್ಯಾಪಕ ಅಕ್ರಮವಾಗಿದೆ ಮತಗಳ್ಳತನದ ಬಗ್ಗೆ ಆರೋಪ ಕೇಳಿ ಬಂದಿದೆ. ಇವಿಎಂಗಳ ಬಗ್ಗೆ ಜನರಲ್ಲಿ ವಿಶ್ವಾಸವಿಲ್ಲ. ಹೀಗಾಗಿ ಬ್ಯಾಲೆಟ್ ಪೇಪರ್ ನಲ್ಲಿ ಮತದಾನ ಮಾಡುವ ವ್ಯವಸ್ಥೆ ಜಾರಿಗೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.